*ಮೈ ಕೊರೆವ ಚಳಿ ನಡುವೆ ಮಳೆ*: *15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೈ ಕೊರೆವ ಚಳಿ ನಡುವೆಯೇ ಜಿಟಿ ಜಿಟಿ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ಮುಂಜಾನೆಯಿಂದಲೇ ದಟ್ಟ ಮೋಡಕವಿದ ವಾತಾವರಣವಿದ್ದು, ಮೈನೆಯಿಂದ ಹೊರಬರಲಾಗದಷ್ಟು ಚಳಿಯಿದೆ. ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಬಂಗಾಳಕೊಲ್ಲಿಯಿಂದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ 0.96 ಕಿ.ಮೀ ಎತ್ತರದಲ್ಲಿ ತೇವಾಂಶಭರಿತ ಪೂರ್ವ ಮಾರುತಗಳ ಟ್ರಫ್ (Trough) ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆಯ ವಾತಾವರಣ ಮುಂದುವರಿದಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದ ಕನಿಷ್ಠ ತಾಪಮಾನವು 17.5°C ನಿಂದ 24.8°C ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಕರಾವಳಿಯ ಹೊನ್ನಾವರದಲ್ಲಿ ರಾಜ್ಯದ ಅತ್ಯಂತ ಕನಿಷ್ಠ ತಾಪಮಾನ (17.5°C) ದಾಖಲಾಗಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 20°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಇಂದು ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದು ಪ್ರಮುಖವಾಗಿ ಒಣಹವೆ ಇರಲಿದೆ.




