Belagavi NewsBelgaum NewsBusinessCrimeKannada NewsKarnataka News

*ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಗುರುವಾರ (ನ.26) ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸುದೀರ್ಘ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಹುಸಿ ಎಂಬುದು ದೃಢಪಟ್ಟಿದೆ.

ನ್ಯಾಯಾಲಯದ ಕಟ್ಟಡವನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಈ ಸಂದೇಶ ಗಮನಕ್ಕೆ ಬರುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿದ್ದವರು ಆತಂಕಗೊಂಡಿದ್ದರು. ಕೂಡಲೇ ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.

ಮಾಹಿತಿ ಪಡೆದ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದರು. ಜಿಲ್ಲಾ ನ್ಯಾಯಾಲಯದ ಎರಡೂ ಕಟ್ಟಡಗಳ ಒಳಭಾಗ ಮತ್ತು ಹೊರ ಆವರಣದಲ್ಲಿ ವ್ಯಾಪಕ ತಪಾಸಣೆ ನಡೆಸಲಾಯಿತು.

ಸುದೀರ್ಘ ಪರಿಶೀಲನೆಯ ಬಳಿಕ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಬಾಂಬ್ ಬೆದರಿಕೆ ಕೇವಲ ಹುಸಿ ಸಂದೇಶ ಎಂಬುದು ಸ್ಪಷ್ಟವಾಗಿದ್ದು, ನ್ಯಾಯಾಲಯದ ಆವರಣದಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.

Related Articles

Back to top button