Film & EntertainmentKannada NewsKarnataka NewsLatest

*ಕೋರ್ಟ್‌ ಅನುಮತಿ ಕೊಟ್ಟರೂ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲು ಜೈಲು ಅಧಿಕಾರಿಗಳ ಹಿಂದೇಟು*

ಪ್ರಗತಿವಾಹಿನಿ ಸುದ್ದಿ: ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಕೊನೆಗೂ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಮಹತ್ವದ ಆದೇಶ ಸಿಕ್ಕಿದೆ. ಫಿಸಿಯೋಥೆರಪಿ ಚಿಕಿತ್ಸೆ ಅಗತ್ಯವಿದ್ದರೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕೋರ್ಟ್ ಅನುಮತಿ ನೀಡಿದೆ. ಆದರೆ, ದರ್ಶನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ. ಈ ಬಗ್ಗೆ ಕಾರಾಗೃಹ ಇಲಾಖೆ ನೀಡಿರುವ ಮಾಹಿತಿ ಕುತೂಹಲ ಮೂಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಮತ್ತು ಚಿಕಿತ್ಸೆ ದೊರೆಯುತ್ತಿಲ್ಲ. ಹೀಗಾಗಿ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ದರ್ಶನ್ ಅವರಿಗೆ ಫಿಸಿಯೋಥೆರಪಿ ಅಗತ್ಯವಿದ್ದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡಿ ಆದೇಶಿಸಿದೆ. ಆದೇಶವನ್ನು ಇಂದೇ ಜೈಲು ಅಧಿಕಾರಿಗಳಿಗೆ ತಲುಪಿಸುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಇ-ಮೇಲ್ ಮೂಲಕ ತಕ್ಷಣವೇ ಆದೇಶದ ಪ್ರತಿಯನ್ನು ಜೈಲು ಅಧಿಕಾರಿಗಳಿಗೆ ರವಾನಿಸಲು ಸೂಚಿಸಿತು.

ಇದೇ ವೇಳೆ, ಈ ಅರ್ಜಿಗೆ ಸಂಬಂಧಿಸಿದಂತೆ ಸೋಮವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನ್ಯಾಯಾಲಯ ಸೂಚನೆ ನೀಡಿದೆ.

ಆದರೆ, ನ್ಯಾಯಾಲಯದ ಆದೇಶದ ಬೆನ್ನಲ್ಲೇ ದರ್ಶನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸುವ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ಕಾರಾಗೃಹ ಇಲಾಖೆ ತೀರ್ಮಾನಿಸಿದೆ.

ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ನೀಡಿರುವ ಮಾಹಿತಿಯ ಪ್ರಕಾರ, ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲಿದ್ದಾರೆ. ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಜೈಲಿನಲ್ಲೇ ಚಿಕಿತ್ಸೆ ಮುಂದುವರಿಸಲು ಅಧಿಕಾರಿಗಳು ನಿರ್ಧರಿಸಿದ್ದು, ನಾಳೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಜೈಲಿನ ವೈದ್ಯರು ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ದರ್ಶನ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅವಕಾಶ ನೀಡಿದ್ದರೂ, ಸದ್ಯಕ್ಕೆ ಜೈಲಿನಲ್ಲೇ ಫಿಸಿಯೋಥೆರಪಿ ನಡೆಯಲಿದೆ. ವೈದ್ಯರ ಪರಿಶೀಲನೆಯ ಬಳಿಕವಷ್ಟೇ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ಅಂತಿಮ ನಿರ್ಧಾರವಾಗಲಿದೆ.

Related Articles

Back to top button