*ಹಳ್ಳಿಯ ಪ್ರತಿ ಮಹಿಳೆಯ ಹೆಸರಿಗೆ ಎರಡು ಹಸು*: *ಚುನಾವಣೆಗೂ ಮುನ್ನವೇ ಹೆಚ್‌ಡಿಕೆ ಭರ್ಜರಿ ಭರವಸೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2028ರ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ಘೋಷಣೆಗಳು ಈಗಿನಿಂದಲೇ ಸದ್ದು ಮಾಡಲಾರಂಭಿಸಿವೆ. ಈ ನಡುವೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಭರವಸೆಯೊಂದನ್ನು ನೀಡಿದ್ದಾರೆ. ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಮಹಿಳೆಯರಿಗೆ ವಿಶೇಷ ಕೊಡುಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಘೋಷಣೆಯ ಜೊತೆಗೆ ರಾಜ್ಯ ಸರ್ಕಾರದ ವಿರುದ್ಧವೂ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.
ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟವಾದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿಚಾರವನ್ನೂ ಪ್ರಸ್ತಾಪಿಸಿದ ಕುಮಾರಸ್ವಾಮಿ, ಚಿಕ್ಕಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಕಾಂಗ್ರೆಸ್ ಪರ ಸಂಘಟನೆಗಳ ಹೆಸರಿನಲ್ಲಿ ಪ್ರತಿ ಪಂಚಾಯಿತಿಗೆ 10 ಲಕ್ಷ ರೂಪಾಯಿಯಂತೆ ಒಟ್ಟು 1,000 ಕೋಟಿ ರೂಪಾಯಿ ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂಪಾಯಿ ನೀಡಲು ಸರ್ಕಾರಕ್ಕೆ ಶಕ್ತಿ ಇರುವಾಗ, ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು 350 ಕೋಟಿ ರೂಪಾಯಿ ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
2018ರಲ್ಲಿ ರೈತರ ಸಾಲಮನ್ನಾ ಮಾಡಿದ್ದ ಸಂದರ್ಭದಲ್ಲಿಯೂ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂಪಾಯಿ ಹೆಚ್ಚಳ ಮಾಡಿದ್ದೆ ಎಂದು ಅವರು ನೆನಪಿಸಿಕೊಂಡರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಮ್ಮ ವಿರುದ್ಧ ಮಾಡಿರುವ ಟೀಕೆಗಳಿಗೂ ತಿರುಗೇಟು ನೀಡಿದ ಕುಮಾರಸ್ವಾಮಿ, “ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?” ಎಂದು ಪ್ರಶ್ನಿಸಿದರು.
ಹೀಗೆ ಗ್ರಾಮೀಣ ಮಹಿಳೆಯರಿಗೆ ಎರಡು ಹಸುಗಳ ಉಚಿತ ಕೊಡುಗೆಯ ಭರವಸೆ ನೀಡಿರುವ ಕುಮಾರಸ್ವಾಮಿ, ಆಶಾ ಕಾರ್ಯಕರ್ತೆಯರ ಬೇಡಿಕೆ ಮತ್ತು ರಾಜ್ಯ ಸರ್ಕಾರದ ವೆಚ್ಚದ ವಿಚಾರವನ್ನೂ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.




