EducationKannada NewsKarnataka News

*ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ*: *ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ಧತೆಯ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಜನಗಣತಿ ಸೇರಿದಂತೆ ಯಾವುದೇ ಬಾಹ್ಯ ಕಾರ್ಯಗಳಿಗೆ ನಿಯೋಜಿಸಲು ಅವಕಾಶ ನೀಡುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಶಿಕ್ಷಕರನ್ನು ಪರೀಕ್ಷಾ ಸಮಯದಲ್ಲಿ ಇತರ ಕಾರ್ಯಗಳಿಗೆ ನಿಯೋಜಿಸುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ ಅವರು, ಅಗತ್ಯಬಿದ್ದರೆ ಶಿಕ್ಷಕರ ಪರವಾಗಿ ಹೋರಾಟಕ್ಕೂ ಸಿದ್ಧ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ಬೆಂಗಳೂರಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ವಲಯದ ಸಂಪನ್ಮೂಲ ಶಿಕ್ಷಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರ ಬಾಹ್ಯ ಕಾರ್ಯಗಳಿಗೆ ನಿಯೋಜಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವೇ ಸರ್ಕಾರದ ಆದ್ಯತೆಯಾಗಿದ್ದು, ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಎಸ್‌ಎಸ್‌ಎಲ್‌ಸಿಗೆ ಮಿಷನ್ 70+ ಗುರಿ

ಈಗಾಗಲೇ ಧಾರವಾಡದ ಐಐಟಿಯಲ್ಲಿ ಮಿಷನ್ 60+ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮಿಷನ್ 70+ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು. ಶಿಕ್ಷಕರ ಸಾಮರ್ಥ್ಯದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೆ ತರಲಾಗುವುದು. ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಮಕ್ಕಳು ಉತ್ತಮ ಜ್ಞಾನ ಹೊಂದಬೇಕು. ಕನ್ನಡದ ಮೇಲಿನ ಹಿಡಿತವನ್ನು ಉಳಿಸಿಕೊಂಡೇ ಇಂಗ್ಲಿಷ್ ಕಲಿಯುವುದರಿಂದ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.

ತಮ್ಮ ಸಹೋದರಿ ಗೀತಾ ಶಿವರಾಜ್‌ಕುಮಾರ್ ಅವರ ಶಿಕ್ಷಣವನ್ನು ಉದಾಹರಣೆಯಾಗಿ ನೀಡಿದ ಸಚಿವರು, ಅವರು ಶಿವಮೊಗ್ಗದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು, ಇದೇ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಮುಂದುವರಿಸಿದ್ದರು. ಬಳಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪಡೆದಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಓದಿದರೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಸಾಧಿಸಲು ಸಾಧ್ಯ ಎಂಬುದಕ್ಕೆ ಅವರೇ ಉದಾಹರಣೆ ಎಂದರು.

ಶಿಕ್ಷಕರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿರುವುದರಿಂದ ಹೆಚ್ಚುವರಿ ತರಗತಿಗಳನ್ನು ನಡೆಸಲು ಅನುಕೂಲವಾಗಿದೆ. ಕಳೆದ ವರ್ಷವೂ ಇದರ ಸಕಾರಾತ್ಮಕ ಫಲಿತಾಂಶ ಕಂಡುಬಂದಿದ್ದು, ಈ ಬಾರಿಯೂ ಉತ್ತಮ ಫಲಿತಾಂಶ ಸಾಧಿಸುವ ಮೂಲಕ ಶೇ.100ರ ಗುರಿ ತಲುಪಬೇಕು ಎಂದು ಹೇಳಿದರು.

ಎಸ್‌ಐಆರ್ ವಿಚಾರವನ್ನು ನನಗೆ ಬಿಡಿ. ಶಿಕ್ಷಕರು ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವತ್ತ ಗಮನಹರಿಸಿ. ಶಿಕ್ಷಕರನ್ನು ಯಾವುದೇ ಸಂದರ್ಭದಲ್ಲಿಯೂ ಕೈಬಿಡುವ ಪ್ರಶ್ನೆಯೇ ಇಲ್ಲ. ಶಿಕ್ಷಣವನ್ನು ಹಣ ಕೊಟ್ಟು ಖರೀದಿಸಲು ಸಾಧ್ಯವಿಲ್ಲ. ನಿಜವಾದ ಶಿಕ್ಷಣವನ್ನು ಶಿಕ್ಷಕರಿಂದಲೇ ಪಡೆಯಲು ಸಾಧ್ಯ. ಶಿಕ್ಷಕರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ‘ಅಕ್ಷರ’ ಕಾರ್ಯಕ್ರಮವನ್ನು ಸ್ಮರಿಸಿದ ಅವರು, ಪ್ರತಿನಿತ್ಯ ಮಗುವಿಗೆ ಒಂದು ರೂಪಾಯಿ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗಿದ್ದರು. ಅದೇ ರೀತಿ ಶಿಕ್ಷಕರು ಮತ್ತು ಮಕ್ಕಳಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡಲು ತಾನು ಸದಾ ಸಿದ್ಧ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್, ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನಿತಾ ಡಿಸೋಜಾ, ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

Related Articles

Back to top button