CrimeKannada NewsKarnataka NewsLatest

*ಕಾರು-ಬೈಕ್ ಮುಖಾಮುಖಿ ಡಿಕ್ಕಿ*: *ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಸಂಜೆ ಮನೆಗೆ ಮರಳುತ್ತಿದ್ದ ಮೂವರು ಕಾರ್ಮಿಕರು ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಕಾರು ಕೂಡ ಪಲ್ಟಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ರಸ್ತೆಯ ಗುಂಡಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕಣಿವೆನಹಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಶ್ರೀನಿವಾಸ (45), ಮೇಘಶ (23) ಮತ್ತು ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲದ ಕಾರ್ಮಿಕರು ಎಂದು ತಿಳಿದುಬಂದಿದೆ.

ಮೃತರು ಪಾವಗಡದಿಂದ ಆಂಧ್ರಪ್ರದೇಶದ ಮಡಕಶಿರಾ ಕಡೆಗೆ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಡಕಶಿರಾ ಕಡೆಯಿಂದ ಪಾವಗಡದತ್ತ ವೇಗವಾಗಿ ಬರುತ್ತಿದ್ದ ಕಾರು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು, ಕಣಿವೆನಹಳ್ಳಿ ಗೇಟ್ ಬಳಿಯ ರಸ್ತೆಯಲ್ಲಿರುವ ಗುಂಡಿಗಳನ್ನು ತಪ್ಪಿಸಲು ಹೋಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಯ ಗುಂಡಿಗಳಿಂದ ಇಂತಹ ಅಪಘಾತಗಳು ಸಂಭವಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Related Articles

Back to top button