Kannada NewsKarnataka NewsLatestPolitics

*ಲೋಕಸಭೆ ಕ್ಷೇತ್ರಗಳ ಸಂಖ್ಯೆ ಶೇ.50 ಹೆಚ್ಚಳಕ್ಕೆ ಸಿದ್ಧತೆ*: *ಮಹಿಳಾ ಮೀಸಲಾತಿ ಜಾರಿಗೆ ಅಮಿತ್ ಶಾ ಮುಂದಿಟ್ಟ ಹೊಸ ಪ್ರಸ್ತಾವನೆ ಏನು?*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಚಾರ ಮತ್ತೆ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಬಂದಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊಸ ಸಿದ್ಧತೆ ನಡೆಸಿದೆ. ಇದಕ್ಕಾಗಿ ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನೂ ಹೆಚ್ಚಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಈ ಮಹತ್ವದ ಸಂವಿಧಾನ ತಿದ್ದುಪಡಿ ವಿಧೇಯಕಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅಮಿತ್ ಶಾ, ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇ. 50ರಷ್ಟು ಹೆಚ್ಚಿಸುವ 132ನೇ ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಬೆಂಬಲಿಸುವಂತೆ ಪಕ್ಷಗಳಿಗೆ ಕರೆ ನೀಡಿದ್ದಾರೆ.

ಈ ತಿದ್ದುಪಡಿಯಿಂದ 2029ರ ಲೋಕಸಭಾ ಚುನಾವಣೆಯ ವೇಳೆಗೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಗೆ ತರಲು ದಾರಿ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ನವೆಂಬರ್ 27ರಂದು 132ನೇ ಸಂವಿಧಾನ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಚುನಾಯಿತ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಬಲಿಷ್ಠ ಸ್ಥಾನ ಕಲ್ಪಿಸುವುದು ಮೋದಿ ಸರ್ಕಾರದ ಬದ್ಧತೆಯಾಗಿದೆ. ಮಹಿಳೆಯರ ದಶಕಗಳ ಕಾಯುವಿಕೆ ಅಂತ್ಯಗೊಳ್ಳುವ ಸಮಯ ಬಂದಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

‘ನಾರಿ ಶಕ್ತಿ ವಂದನ್ ಅಧಿನಿಯಮ’ದ ಮೂಲಕ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಆಶಯವನ್ನು ಈಡೇರಿಸಲು ಈ ತಿದ್ದುಪಡಿ ನೆರವಾಗಲಿದೆ. ಆಡಳಿತದಲ್ಲಿ ಮಹಿಳೆಯರನ್ನು ಪ್ರಬಲ ಪಾಲುದಾರರನ್ನಾಗಿ ಮಾಡುವ ಈ ಐತಿಹಾಸಿಕ ಉಪಕ್ರಮಕ್ಕೆ ಎಲ್ಲ ಪಕ್ಷಗಳು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇನ್ನು, ನವೆಂಬರ್ 27ರಂದು ಕೇಂದ್ರ ಸಚಿವ ಸಂಪುಟ ಅನುಮೋದಿಸಿರುವ ಪರಿಷ್ಕೃತ ಕ್ಷೇತ್ರ ಪುನರ್‌ವಿಂಗಡಣೆ ಯೋಜನೆಯ ಪ್ರಕಾರ, ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಶೇ. 50ರಷ್ಟು ಹೆಚ್ಚಿಸಲು ಪ್ರಸ್ತಾವಿಸಲಾಗಿದೆ. ಜೊತೆಗೆ 2051ರವರೆಗೆ ರಾಜ್ಯಗಳ ನಡುವಿನ ಪ್ರಸ್ತುತ ಪ್ರಾತಿನಿಧ್ಯದ ಅನುಪಾತವನ್ನು ಸ್ಥಿರವಾಗಿಡುವ ಉದ್ದೇಶವಿದೆ.

ಈ ಪ್ರಸ್ತಾವನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಎದುರಾಗಬಹುದಾದ ಪ್ರಾತಿನಿಧ್ಯದ ಆತಂಕ ನಿವಾರಣೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಡಿಎಂಕೆ, ಟಿಡಿಪಿ, ಜೆಡಿಎಸ್, ಬಿಆರ್‌ಎಸ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಸೇರಿದಂತೆ ಹಲವು ಪಕ್ಷಗಳು ವಿಧೇಯಕಕ್ಕೆ ಬೆಂಬಲ ಸೂಚಿಸಿವೆ. ಆದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಕೆಲವು ಪಕ್ಷಗಳು ಇದನ್ನು ವಿರೋಧಿಸಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಈ ಸಂವಿಧಾನ ತಿದ್ದುಪಡಿ ವಿಧೇಯಕ ಅಂಗೀಕಾರವಾಗಬೇಕಾದರೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಬಹುಮತ ಅಗತ್ಯವಿದೆ. ಹೀಗಾಗಿ ನವೆಂಬರ್ 30ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ಈ ವಿಧೇಯಕದ ಕುರಿತು ನಡೆಯುವ ಚರ್ಚೆ ಮತ್ತು ಪಕ್ಷಗಳ ನಿಲುವು ನಿರ್ಣಾಯಕವಾಗಲಿದೆ.

Related Articles

Back to top button