*ಕಾರಿನೊಳಗೆ ಸಿಕ್ಕ ಆನೆದಂತಗಳ ರಹಸ್ಯವೇನು?*: *15 ದಿನಗಳ ಕಾರ್ಯಾಚರಣೆ ಬಳಿಕ ಮೂವರು ಅಂದರ್*

ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲಿ ಕೆಲವರು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಇದರ ಬೆನ್ನಲ್ಲೇ ಸುಮಾರು 15 ದಿನಗಳಿಂದ ಅವರ ಚಲನವಲನದ ಮೇಲೆ ನಿಗಾ ಇಡಲಾಗಿತ್ತು. ಕೊನೆಗೂ ತಮಿಳುನಾಡಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರಿಗೆ ಬೆಚ್ಚಿಬೀಳಿಸುವ ವಸ್ತುಗಳು ಸಿಕ್ಕಿವೆ. ಬರೋಬ್ಬರಿ ಏಳು ಆನೆದಂತಗಳು ಮತ್ತು ವನ್ಯಜೀವಿ ಬೇಟೆಗೆ ಬಳಸುವ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಆನೇಕಲ್ ತಾಲೂಕಿನ ಮುತ್ಯಾಲಮಡುವಿನ ಬಳಿ ಈ ಕಾರ್ಯಾಚರಣೆ ನಡೆದಿದೆ. ತಮಿಳುನಾಡು ಮೂಲದ ಸತೀಶ್ವರನ್, ಶರತ್ ಕುಮಾರ್ ಹಾಗೂ ಶಂಕರ್ ಬಂಧಿತ ಆರೋಪಿಗಳು.
ಬಂಧಿತರಿಂದ ಏಳು ಆನೆದಂತಗಳು, ಒಂದು ಕಾರು, ಮೊಬೈಲ್ ಫೋನ್ಗಳು ಹಾಗೂ ವನ್ಯಜೀವಿಗಳನ್ನು ಬೇಟೆಯಾಡಲು ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವನ್ಯಜೀವಿಗಳ ಬೇಟೆ, ಆನೆದಂತ ಮತ್ತು ಜಿಂಕೆ ಮಾಂಸ ಸಾಗಾಟದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಮಾಹಿತಿ ಕಲೆಹಾಕಿ ಆರೋಪಿಗಳ ಚಲನವಲನದ ಮೇಲೆ ನಿಗಾ ಇರಿಸಲಾಗಿತ್ತು.
ಆನೇಕಲ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಮಿಳುನಾಡಿನಿಂದ ಬೆಂಗಳೂರಿಗೆ ಕಾರಿನಲ್ಲಿ ಆನೆದಂತಗಳನ್ನು ಮಾರಾಟ ಮಾಡಲು ಬರುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆನೆದಂತಗಳ ಮೂಲ ಯಾವುದು, ವನ್ಯಜೀವಿ ಬೇಟೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



