
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ (SNF) ವಿತರಣೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
2026-27ನೇ ಸಾಲಿನ ಎರಡನೇ ತ್ರೈಮಾಸಿಕ ಅವಧಿಯಾದ ಅಕ್ಟೋಬರ್‌ನಿಂದ ಡಿಸೆಂಬರ್ 2026ರವರೆಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಗಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ (APF) ವತಿಯಿಂದ ಒಟ್ಟು ₹79.95 ಕೋಟಿ ಅನುದಾನ ಬಿಡುಗಡೆಯಾಗಿದೆ.
ಈ ಪೈಕಿ ಹಿಂದಿನ ಅವಧಿಯ ಖಾತೆಯಲ್ಲಿರುವ ಉಳಿಕೆ ಅನುದಾನ ಸೇರಿದಂತೆ ₹79.67 ಕೋಟಿ ಹಣವನ್ನು ಜಿಲ್ಲೆ ಮತ್ತು ತಾಲ್ಲೂಕು ಹಂತದ ಖಾತೆಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಅವರು ನವೆಂಬರ್ 28ರಂದು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ.
ಸರ್ಕಾರದಿಂದ ವಾರದಲ್ಲಿ ಎರಡು ದಿನ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರ ನೀಡಲಾಗುತ್ತಿದ್ದು, ಉಳಿದ ನಾಲ್ಕು ದಿನಗಳ ಪೂರಕ ಪೌಷ್ಟಿಕ ಆಹಾರದ ವೆಚ್ಚವನ್ನು ಅಜೀಂ ಪ್ರೇಮ್‌ಜಿ ಫೌಂಡೇಶನ್ ಭರಿಸುತ್ತಿದೆ. ಈ ಕಾರ್ಯಕ್ರಮದಡಿ ವಾರದಲ್ಲಿ ಆರು ದಿನಗಳೂ ಮೊಟ್ಟೆ ವಿತರಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಮೊಟ್ಟೆ ಸ್ವೀಕರಿಸದ ವಿದ್ಯಾರ್ಥಿಗಳಿಗೆ ಮಾತ್ರ ಇಲಾಖೆಯ ಮಾರ್ಗಸೂಚಿಯಂತೆ ಬಾಳೆಹಣ್ಣು ವಿತರಿಸಬೇಕು. ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ₹6ರ ಘಟಕ ವೆಚ್ಚದ ಮಿತಿಯಲ್ಲಿ ಕಾರ್ಯಕ್ರಮ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಅನುದಾನದ ಕೊರತೆಯ ನೆಪದಲ್ಲಿ ಯಾವುದೇ ಶಾಲೆಯಲ್ಲಿ ಮೊಟ್ಟೆ ವಿತರಣೆಯನ್ನು ಸ್ಥಗಿತಗೊಳಿಸಬಾರದು ಎಂದು ಇಲಾಖೆ ಎಚ್ಚರಿಸಿದೆ.
ಮೊಟ್ಟೆ ಸ್ವೀಕರಿಸುವ ವಿದ್ಯಾರ್ಥಿಗಳಿದ್ದರೂ ವಾರದಲ್ಲಿ ಎರಡು ಅಥವಾ ಮೂರು ದಿನ ಮಾತ್ರ ಮೊಟ್ಟೆ ನೀಡಿ ಉಳಿದ ದಿನಗಳಲ್ಲಿ ಬಾಳೆಹಣ್ಣು ವಿತರಿಸುವುದು, ಹಣದ ಕೊರತೆಯಿಂದ ಮೊಟ್ಟೆ ವಿತರಣೆ ನಿಲ್ಲಿಸುವುದು ಸೇರಿದಂತೆ ಇಂತಹ ದೂರುಗಳು ಬಂದರೆ ಗಂಭೀರವಾಗಿ ಪರಿಗಣಿಸಲಾಗುತ್ತದೆ.
ಸಂಬಂಧಪಟ್ಟ ಶಾಲೆಯ ಮುಖ್ಯಶಿಕ್ಷಕರು ಹಾಗೂ ತಾಲ್ಲೂಕು ಮಟ್ಟದ ಮೇಲ್ವಿಚಾರಣಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


