*ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ವಿದೇಶಕ್ಕೂ ವಿಸ್ತರಣೆ*: *ಸದ್ಗುರು ಶ್ರೀ ಮಧುಸೂದನ್ ಸಾಯಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮೌಲ್ಯಾಧಾರಿತ ಶಿಕ್ಷಣವನ್ನು ಜಗತ್ತಿನೆಲ್ಲೆಡೆ ತಲುಪಿಸುವ ಉದ್ದೇಶದಿಂದ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವನ್ನು ಭಾರತ, ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸದೆ ವಿದೇಶಗಳಿಗೆ ವಿಸ್ತರಿಸಲಾಗುತ್ತದೆ ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಘೋಷಣೆ ಮಾಡಿದ್ದಾರೆ.
ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಭಾನುವಾರ (ನ.29) ನಡೆದ ವಿಶ್ವ ಯುವ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಸದ್ಗುರು, ಮಕ್ಕಳಿಗೆ ಈ ಶಿಕ್ಷಣ ಡಿಜಿಟಲ್ ಮತ್ತು ಭೌತಿಕವಾಗಿ ಸಿಗಬೇಕೆಂಬುದು ನಮ್ಮ ಉದ್ದೇಶವಾಗಿದ್ದು, ನೈಜೀರಿಯಾ, ಫಿಜಿ, ಅರ್ಜೆಂಟೀನಾ ಹಾಗೂ ಅಮೆರಿಕದಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಗಳನ್ನು ತೆರೆಯಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಏನೆಲ್ಲಾ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.
ಮುಖ್ಯವಾಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಕೆಲವು ಬದಲಾವಣೆಗಳನ್ನು ತರಬೇಕಾಗುತ್ತದೆ. ಸರ್ಕಾರದ ಮೊರೆ ಹೋಗಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕಾಗುತ್ತದೆ. ಮುಂಬರುವ ವರ್ಷ ನಾವು ಈ ಪ್ರಕ್ರಿಯೆಯನ್ನು ಕೈಗೊಳ್ಳಲಿದ್ದೇವೆ. ಎಲ್ಲರ ಸಹಕಾರ ಮತ್ತು ಬೆಂಬಲದೊಂದಿಗೆ ಇದನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮುಂದಿನ ವರ್ಷದ ವಿಶ್ವ ಯುವ ಸಮ್ಮೇಳನದಲ್ಲಿ ಸತ್ಯ, ಧರ್ಮ, ಶಾಂತಿ, ಪ್ರೇಮ ಮತ್ತು ಅಹಿಂಸೆ ಈ ಐದು ಅಂಶಗಳ ಬಗ್ಗೆ ಚರ್ಚಿಸಲಾಗುತ್ತದೆ. ಇವು ಪ್ರಪಂಚದ ಯಾವುದೇ ಭಾಗದ ಜನರಿಗೂ ಸುಲಭವಾಗಿ ಅರ್ಥವಾಗುವಂತಹ ವಿಷಯಗಳಾಗಿರುವುದನ್ನು ಇದನ್ನೇ ಆಯ್ಕೆ ಮಾಡಲಾಗಿದೆ ಎಂದು ಸದ್ಗುರು ಹೇಳಿದರು.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಮಾತನಾಡಿ, ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಮೂಲಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತರುತ್ತಿರುವ ಪರಿವರ್ತನೆ, ಜಗತ್ತಿನ ಯಾವುದೇ ಸಂಸ್ಥೆ ಅಥವಾ ವ್ಯಕ್ತಿ ಮಾಡಲಾಗದಂತಹ ಕೆಲಸವಾಗಿದೆ ಎಂದು ಶ್ಲಾಘಿಸಿದರು.
ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷರಾದ ಡಾ ಬಿ ಎನ್ ನರಸಿಂಹ ಮೂರ್ತಿ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ನಿರ್ದೇಶಕರಾದ ಸುನಿಲ್ ನಾಯ್ಡು ಮತ್ತು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ನ ಮುಖ್ಯ ಸಹಯೋಗ ಅಧಿಕಾರಿ ಡಾ ಭುವನಾ ಸಂತಾನಂ ಮಾತನಾಡಿದರು.
ಇದೇ ವೇಳೆ, ಮೌಲ್ಯಾಧಾರಿತ ಶಿಕ್ಷಣಕ್ಕೆ ಸಂಬಂಧಿಸಿದ ‘ಬೀ ಗುಡ್ ಸೀ ಗುಡ್ ಡು ಗುಡ್’ ಪೋಲ್ಯಾಂಡ್ ಮತ್ತು ಅರ್ಜೆಂಟೀನಾ ಭಾಷೆಗಳ ಪುಸ್ತಕಗಳನ್ನು ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರು ಲೋಕಾರ್ಪಣೆ ಮಾಡಿದರು.
ನಾಲ್ಕು ದಿನಗಳ ವಿಶ್ವ ಯುವ ಸಮ್ಮೇಳನದಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕ್ರೊಯೆಷಿಯಾ, ಜರ್ಮನಿ ಸೇರಿದಂತೆ 31 ದೇಶಗಳಿಂದ 240 ಪ್ರತಿನಿಧಿಗಳು ಭಾಗವಹಿಸಿದ್ದರು.




