Belagavi NewsBelgaum NewsKannada NewsKarnataka News

*ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ ಹಲವು ಯೋಜನೆ*: *ಡಾ. ಎಸ್. ಜಾಫೆಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರೈಸ್ತ ಸಮುದಾಯದ ಆರ್ಥಿಕ ಸಬಲೀಕರಣ, ಸಾಮಾಜಿಕ ಅಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಸ್. ಜಾಫೆಟ್ ಕರೆ ನೀಡಿದರು.

ಬೆಳಗಾವಿ ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಬೆಳಗಾವಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಬೇಡಿಕೆಗಳು ವ್ಯಕ್ತವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರಸ್ತುತ ಸರ್ಕಾರ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಿಗಮವು ಕೇವಲ ಅನುದಾನ ವಿತರಿಸುವ ಸಂಸ್ಥೆಯಾಗದೆ, ಜನಕೇಂದ್ರಿತವಾಗಿ ಕಾರ್ಯನಿರ್ವಹಿಸಿ ಸಮುದಾಯದ ಜನರ ಸಾಮರ್ಥ್ಯ ವೃದ್ಧಿ ಹಾಗೂ ಜೀವನಮಟ್ಟ ಸುಧಾರಣೆಗೆ ನೆರವಾಗಬೇಕು ಎಂಬುದು ಉದ್ದೇಶವಾಗಿದೆ ಎಂದು ತಿಳಿಸಿದರು.

ನಿಗಮದ ಮೂಲಕ ಮೊದಲ ವರ್ಷದಲ್ಲಿ 78 ಕೋಟಿ ರೂ. ಹಾಗೂ ಎರಡನೇ ವರ್ಷದಲ್ಲಿ 90 ಕೋಟಿ ರೂ. ಅನುದಾನ ನೀಡಲಾಗಿದೆ. ಆದರೆ ಅನುದಾನ ಖರ್ಚು ಮಾಡಿರುವುದಷ್ಟೇ ಸಾಧನೆಯಲ್ಲ. ಯೋಜನೆಗಳ ಮೂಲಕ ಫಲಾನುಭವಿಗಳ ಜೀವನದಲ್ಲಿ ಯಾವ ರೀತಿಯ ಬದಲಾವಣೆ ಮತ್ತು ಪ್ರಗತಿ ಉಂಟಾಗಿದೆ ಎಂಬುದು ಮುಖ್ಯವಾಗಿದೆ. ಆದ್ದರಿಂದ ಸಮುದಾಯದ ಜನರು ಯೋಜನೆಗಳ ಕುರಿತು ಮಾಹಿತಿ ಪಡೆದು, ಅರ್ಹತೆಯ ಆಧಾರದ ಮೇಲೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಮಾತನಾಡಿ, ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸದುಪಯೋಗವನ್ನು ಸಮುದಾಯದ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕ್ರೈಸ್ತ ಸಮುದಾಯವು ಶತಮಾನಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ಬೆಳಗಾವಿಯಲ್ಲಿಯೂ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಸೇವೆ ಗಮನಾರ್ಹವಾಗಿದೆ. ತಾವು ಕೂಡ ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಈ ಸಂಸ್ಥೆಗಳು ಶಿಕ್ಷಣದ ಜತೆಗೆ ಶಿಸ್ತು, ನೈತಿಕತೆ ಹಾಗೂ ಮೌಲ್ಯಾಧಾರಿತ ಬೋಧನೆಗೆ ವಿಶೇಷ ಆದ್ಯತೆ ನೀಡುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಸಿಸಿಡಿಸಿ ನಿರ್ದೇಶಕ ಡಾ. ಪ್ರಶಾಂತ್ ಜತ್ತಣ್ಣ ಅವರು ನಿಗಮದ ಯೋಜನೆಗಳು ಹಾಗೂ ಅವುಗಳ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪೂಜಾ ಅವರು ಸ್ವಾಗತಿಸಿದರು.

ವೇದಿಕೆಯಲ್ಲಿ ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಸರ್ಕಾರಿ ನಾಮನಿರ್ದೇಶಿತ ಸದಸ್ಯ ಲೂಯಿಸ್ ರಾಡ್ರಿಗ್ಸ್ ಹಾಗೂ ಫಾದರ್ ಲೂರ್ದು ಸ್ವಾಮಿ ಉಪಸ್ಥಿತರಿದ್ದರು. ಕ್ರೈಸ್ತ ಧರ್ಮಗುರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಹಾಗೂ ಸಮುದಾಯದ ಫಲಾನುಭವಿಗಳು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಾ. ಎಸ್. ಜಾಫೆಟ್, ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿ, ಆರ್ಥಿಕ ಸಬಲೀಕರಣ ಮತ್ತು ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

Related Articles

Back to top button