ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವ ಸಾಧ್ಯತೆಯಿದ್ದು, ಅವರು ಬಿಜೆಪಿಗೆ ಬಂದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ ಎಂದು ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ ಭವಿಷ್ಯ ನುಡಿದಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನ ಹಲವು ಶಾಸಕರು ಬಿಜೆಪಿಗೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅನುಮತಿ ನೀಡಿಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಭವಿಷ್ಯವೇ ಇಲ್ಲದಂತಾಗಿದೆ ಎಂದರು.
ಇನ್ನು ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯ ಕಂಡರೆ, ಡಿ.ಕೆ ಶಿವಕುಮಾರ್ ಮತ್ತು ಪರಮೇಶ್ವರ್ಗೆ ಆಗಲ್ಲ. ಡಿಕೆಶಿ ಮತ್ತು ಪರಮೇಶ್ವರ್ ಕಂಡರೆ ಸಿದ್ಧರಾಮಯ್ಯಗೆ ಆಗಲ್ಲ. ನನಗೆ ಅನ್ಯಾಯವಾದರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರುವ ಎಲ್ಲ ಸಾಧ್ಯತೆಗಳಿವೆ. ಬಿಜೆಪಿಗೆ ಬಂದರೆ ಕೇಂದ್ರ ಸಚಿವ ಸ್ಥಾನ ಖಚಿತ ಎಂದರು.
ಇದೇ ವೇಳೆ, ರಾಜ್ಯ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕ ಕಡೆಗಣನೆ ಮಾಡಲಾಗಿದೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚಿಂಚನಸೂರ ಕಳೆದ 70 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸಿದರು. ಯಡಿಯೂರಪ್ಪನವರು ಹಿಂದುಳಿದ ಭಾಗದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ