ಮಂಗಳೂರು ಹಿಂಸಾಚಾರ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಮಧ್ಯಂತರ ತಡೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಂಗಳೂರು ಹಿಂಸಾಚಾರಕ್ಕೆ ಕಾರಣವಾಗಿದ್ದವರಿಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಪೊಲೀಸ್ ಗೋಲಿಬಾರ್ ನಡೆದಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 21ಜನರನ್ನು ಬಂಧಿಸಲಾಗಿತ್ತು.

21 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾಮೀನು ಪ್ರಶ್ನಿಸಿ ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸದ್ದಕ್ಕೆ ಇರುವ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್ ಮಹಮ್ಮದ್ ಅಶಿಕ್, ಮಹಮ್ಮದ್ ಸುಹಾಲ್, ನಾಸಿರುದ್ದೀನ್, ಮಹಮ್ಮದ್ ಶಾಕೀರ್, ಕಲಂದರ್ ಬಾಷಾ, ಮಹಮ್ಮದ್ ಅಜರ್ ಸೇರಿದಂತೆ 21 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button