ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಲ್ವರಲ್ಲಿ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ವೈರಸ್ ಹರಡದಂತೆ ಸರ್ಕಾರದಿಂದ ಕೈಗೊಳ್ಳಲಾದ ಮುಂಜಾಗೃತಾ ಕ್ರಮಗಳ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಸಾಚಿವರು ಹಾಗೂ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ ನಾಲ್ವರಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ವೈರಸ್ ನಿರ್ವಹಣೆಗೆ ಸಮಿತಿ ಮಾಡಲಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಬಳಿಕ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಸೋಂಕು ಹರಡುವ ಸಾಧ್ಯತೆಯನ್ನು ತಡೆಗಟ್ಟಲು ನಮ್ಮ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ. ಅಮೆರಿಕದಿಂದ ಬಂದಿರುವ ಟೆಕ್ಕಿ ಕುಟುಂಬದ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದರು.
ಈವರೆಗೆ ಕರೋನಾ ವೈರಸ್ ಸೋಂಕು ಇರುವ ದೇಶಗಳಿಂದ ಪ್ರಯಾಣಿಸಿರುವ ಹಾಗೂ ಸೋಂಕಿತರ ಸಂಪರ್ಕದಲ್ಲಿದ್ದ 1048 ಜನರನ್ನು ಗುರುತಿಸಲಾಗಿದೆ. ರೋಗ ಲಕ್ಷಣ ಇರುವ 446 ಮಾದರಿಗಳನ್ನು ಪರೀಕ್ಷೆಗಾಗಿ ಕಳಿಸಲಾಗಿದೆ. 389 ಮಾದರಿಗಳು ನೆಗೆಟಿವ್ ಎಂದು ವರದಿಯಾಗಿದೆ ಎಂದು ತಿಳಿಸಿದರು.
ವೈರಸ್ ಸೋಂಕು ಪರೀಕ್ಷೆಗೆ ಮೈಸೂರು, ಹಾಸನ ಹಾಗೂ ಶಿವಮೊಗ್ಗ ಮೆಡಿಕಲ್ ಕಾಲೇಜುಗಳ ಪ್ರಯೋಗಾಲಯಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ 700 ಹಾಸಿಗೆಗಳನ್ನು ಗುರುತಿಸಲಾಗಿದೆ. 600-700 ಜನರ ತಾತ್ಕಾಲಿಕವಾಗಿ ಪ್ರತ್ಯೇಕವಾಗಿ ಇರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಇನ್ನು ಮಾಸ್ಕ್ಗಳ ಕೊರೆತೆ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ರೀತಿಯ ಸರ್ಜಿಕಲ್ ಮಾಸ್ಕ್, ಔಷಧ ಇತ್ಯಾದಿ ಯಾವುದೇ ಕೊರತೆ ಇಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯ ಇಲ್ಲ. ಸೋಂಕಿತರು ಮತ್ತು ಅವರ ನಿಕಟ ಸಂಪರ್ಕ ಹೊಂದಿರುವವರು ಮಾಸ್ಕ್ ಧರಿಸಿದರೆ ಸಾಕು. ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ