ಪ್ರಗತಿವಾಹಿನಿ ಸುದ್ದಿ; ಲಖನೌ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶದ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪವನ್ನೂ ಕುಲದೀಪ್ ಸಿಂಗ್ ಸೆಂಗಾರ್ ಮೇಲೆ ಇತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಉತ್ತರ ಪ್ರದೇಶದ ಉನ್ನಾವೋದಲ್ಲಿ 2017ರಲ್ಲಿ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಯುವತಿ ಹತ್ಯೆಗೆ ಯತ್ನ ನಡೆದಿತ್ತು. ಸಾವು ಬದುಕಿನ ನಡುವೆ ಹೋರಾಡಿದ್ದ ಯುವತಿ ಅಪರಾಧಿಗಳ ಗುರುತು ತಿಳಿಸಿ ಸಾವನ್ನಪ್ಪಿದ್ದಳು. ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕುಲದೀಪ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಉತ್ತರ ಪ್ರದೇಶದ ಬಂಗೆರ್ಮಾವ್ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ 4 ಬಾರಿ ಶಾಸಕರಾಗಿದ್ದ ಕುಲದೀಪ್ ಸೆಂಗಾರ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದರಿಂದ ಕುಲದೀಪ್ ರನ್ನು ಪಕ್ಷದಿಂದಲೇ ಬಿಜೆಪಿ ಉಚ್ಛಾಟನೆ ಮಾಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ