ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿ ಇಡಲಾಗಿದ್ದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಏಳು ತಿಂಗಳ ಬಳಿಕ ಇದೀಗ ಬಿಡುಗಡೆ ಮಾಡಲಾಗಿದೆ.
ಕಾಶ್ಮೀರಕ್ಕೆ ನೀಡಿದ್ದ ಸವಲತ್ತನ್ನು ಹಿಂಪಡೆದ ಬೆನ್ನಲ್ಲೇ ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ಮುಖಂಡರಿಗೆ ಗೃಹಬಂಧನ ವಿಧಿಸಲಾಗಿತ್ತು. ಗೃಹ ಬಂಧನ ಮುಗಿದ ಬೆನ್ನಲ್ಲೇ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಫಾರೂಕ್ ಅಬ್ದುಲ್ಲಾ ಅವರನ್ನು ಬಿಡುಗಡೆಗೊಳಿಸಲಾಗಿದೆ.
ರಾಜಕೀಯ ನಾಯಕರನ್ನು ಬಿಡುಗಡೆ ಮಾಡಿದರೆ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗಲಿದೆ ಮತ್ತು ಈ ನಾಯಕರು ಜನರನ್ನು ಧಂಗೆ ಏಳಿಸುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು.
ಓಮರ್ ಅಬ್ದುಲ್ಲಾ ತಂಗಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಇನ್ನು ಕೆಲವೇ ದಿನಗಳಲ್ಲಿ ಮೆಹಬೂಬಾ ಮುಫ್ತಿ ಮತ್ತು ಓಮರ್ ಅಬ್ದುಲ್ಲಾ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ