ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ಭಾನುವಾರ ಕರ್ನಾಟಕ ರಾಜ್ಯಾದ್ಯಂತ ಯಶಸ್ವಿಯಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಸಮಸ್ತ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜನರು ಮನೆಯಿಂದ ಹೊರಗೆ ಬಾರದೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಜೊತೆಗೆ ಸಂಜೆ 5 ಗಂಟೆಗೆ ಚಪ್ಪಾಳೆ, ಜಾಗಟೆ, ಶಂಕನಾದದ ಮೂಲಕ ಶ್ರಮಜೀವಿಗಳಿಗೆ ಜನರು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಗಳ ಒಂದು ಕರೆಗೆ ಇಡೀ ರಾಷ್ಟ್ರದ ಜನರು ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದಲ್ಲೂ ಅತ್ಯಂತ ಯಶಸ್ವಿಗೊಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ವಿರುದ್ಧ ನಮ್ಮ ಹೋರಾಟ ಮುಂದುವರಿಸಬೇಕಾಗಿದೆ. ಕೇಂದ್ರದ ನರೇಂದ್ರ ಮೋದಿ ಸರಕಾರ ಮತ್ತು ರಾಜ್ಯದ ಬಿ.ಎಸ್.ಯಡಿಯೂರಪ್ಪ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಕೂಡ ಜನರ ಸಹಕಾರ ಅಗತ್ಯವಾಗಿದೆ ಎಂದೂ ಶಂಕರಗೌಡ ಪಾಟೀಲ ವಿನಂತಿಸಿದ್ದಾರೆ.
ಜನರು ತಾವು ಸುರಕ್ಷಿತವಾಗಿರುವ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನೂ ಕಾಪಾಡಬೇಕು. ತೀರಾ ಅನಿವಾರ್ಯ ಸಂದರ್ಭ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಹೋರಾಡಬೇಕಿದೆ. ಜನರು ತಾಳ್ಮೆಯಿಂದ ಮತ್ತು ಜಾಗರೂಕತೆಯಿಂದ ಇದ್ದರೆ ಈ ಸಂದಿಗ್ದ ಪರಿಸ್ಥಿತಿಯಿಂದ ಪಾರಾಗಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ