ಪ್ರಗತಿವಾಹಿನಿ ಸುದ್ದಿ: ಹಾವೇರಿ: ಕೊರೊನಾ ವೈರಸ್ ನಂತಹ ಗಂಭೀರ ಸಮಸ್ಯೆ ಇರುವಾಗ ಮೆಡಿಕಲ್ ಶಾಪ್, ಖಾಸಗಿ ಕ್ಲಿನಿಕ್, ಆಸ್ಪತ್ರೆಗಳನ್ನು ಮುಚ್ಚಿದ್ದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಖಾಸಗಿ ವೈದ್ಯರು ಮೆಡಿಕಲ್ ಶಾಪ್, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ನೊಟೀಸ್ಗೂ ಬೆಲೆಕೊಡದೆ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಗಿ ರದ್ದು ಪಡಿಸಲಾಗುವುದು ಎಂದರು.
ಅನಗತ್ಯವಾಗಿ ಮನೆಯಿಂದ ಯಾರೂ ಹೊರಬರಬೇಡಿ. ನಮ್ಮ ನಮ್ಮ ಮನೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವ-ದಿಗ್ಬಂಧನ ಹಾಕಿಕೊಳ್ಳುವ ಮೂಲಕ ನಮ್ಮ ಹಾಗೂ ನಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಆರೋಗ್ಯ ಕಾಪಾಡಲು ಬದ್ಧರಾಗಿದ್ದು, ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ದಿನಸಿ, ತರಕಾರಿ, ಹಣ್ಣು-ಹಂಪಲುಗಳನ್ನು ವಾರ್ಡ್ ವಾರು ತಳ್ಳುಗಾಡಿ ಮೂಲಕ ಮಾರಲು ಅನುಕೂಲ ಮಾಡಿಕೊಡಲಾಗಿದೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ