ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಕ್ವಾರಂಟೈನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ.
ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ವೈಯಕ್ತಿಕ ಸ್ವಚ್ಛತೆ ಸೇರಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ.
ಕ್ವಾರಂಟೈನ್ ನಲ್ಲಿ ಇರಿಸಲಾಗಿರುವ ಎಲ್ಲರ ಗಂಟಲು ದ್ರವದ ಮಾದರಿಯನ್ನು ಒಂದೇ ದಿನ ತೆಗೆದುಕೊಂಡು ಪ್ರಯೋಗಾಲಯಕ್ಕೆ ಕಳಿಸಲಾಗಿರುತ್ತದೆ. ಆದ್ದರಿಂದ ಕ್ವಾರಂಟೈನ್ ಸಂದರ್ಭದಲ್ಲೇ ಸೋಂಕು ಹರಡಿರುತ್ತದೆ ಎಂಬ ಹೇಳಿಕೆಯಲ್ಲಿ ಸತ್ಯಾಂಶವಿರುವುದಿಲ್ಲ.
ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ:
ಸೋಂಕು ದೃಢಪಟ್ಟಿರುವ ಎಲ್ಲರಿಗೂ ಬಿಮ್ಸ್ ಆಸ್ಪತ್ರೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನುಸಾರ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತೀಯ ವೈದ್ಯಕೀಯ ಸಂಘ(ಐ.ಎಂ.ಎ)ದ ಪದಾಧಿಕಾರಿಗಳು ಹಾಗೂ ಹಿರಿಯ ವೈದ್ಯರ ಜತೆ ಸಮಾಲೋಚನೆ ನಡೆಸಿ, ಅವರ ಸಲಹೆ ಮತ್ತು ಅಭಿಪ್ರಾಯಗಳ ಮೇರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಕೋವಿಡ್ -೧೯ ಸೋಂಕು ಹರಡದಂತೆ ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ಸ್ಪಷ್ಟಪಡಿಸಿದ್ದಾರೆ.
ಸೋಂಕಿತರ ಚಿಕಿತ್ಸೆ ಅಥವಾ ಕ್ವಾರಂಟೈನ್ ವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕೋವಿಡ್-೧೯ ಸೋಂಕು ಹರಡುವಿಕೆ ತಡೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ