ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೊಂಕಿನಿಂದಾಗಿ ದೇಶ ತತ್ತರಿಸಿರುವ ಬೆನ್ನಲ್ಲೇ ಇದೀಗ ಚಂಡಮಾರುತದ ಭೀತಿ ಎದುರಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಅಂಫಾನ್ ಚಂಡಮಾರುತ ಪೂರ್ವ ಕರಾವಳಿಗೆ ಅಪ್ಪಳಿಸುವ ಬಗ್ಗೆ ಎಚ್ಚರಿಕೆ ರವಾನಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತದ ರೂಪವನ್ನು ತಾಳಿದೆ. ಇದರ ಪರಿಣಾಮ ಪಶ್ಚಿಮ ಪೂರ್ವ ಕರಾವಳಿ, ಅಂಡಮಾನ್, ನಿಕೋಬಾರ್ ಹಾಗೂ ಒಡಿಶಾ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.
ಇಂದು ಸಂಜೆಯ ವೇಳೆಗೆ ಅಂಫಾನ್ ಚಂಡಮಾರುತ ಬಂಗಾಳ ಕೊಲ್ಲಿಯ ಮೂಲಕ ಹಾದು ಹೋಗಲಿದೆ. ಈ ಹಿನ್ನಲೆಯಲ್ಲಿ ಒಡಿಶಾದ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ತಾಸುಗಳಲ್ಲಿ ಚಂಡುಮಾರುತ ಮತ್ತಷ್ಟು ತೀವ್ರತೆಯನ್ನು ಪಡೆಯಲಿದೆ ಎಂದು ಐಎಂಡಿ ಎಚ್ಚರಿಸಿದೆ.
ಒಡಿಶಾದ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಕಡಲ ತೀರ ಪ್ರದೇಶದಿಂದ ಜನರರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ. ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಮುಂದಿನ ನಾಲ್ಕೈದು ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ವ್ಯಾಪಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲೂ ಮುಂದಿನ ಐದು ದಿನಗಳಲ್ಲಿ ಮಳೆ ಮುಂದುವರಿಯಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ