Latest

ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು ವಿಜಯಪುರದಲ್ಲಿ ಕಂಟೈನ್ಮೆಂಟ್ ವಲಯದ ವ್ಯಕ್ತಿ ಹೃದಯಾಘಾತದಿಂದ ಸಾವಿಗೀಡಾಗಿದ್ದು, ಈ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯದಲ್ಲಿರುವ 60 ವರ್ಷ ಮೇಲ್ಪಟ್ಟ ಎಲ್ಲ ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಈವರೆಗೆ 12 ರಿಂದ 15 ಸಾವಿರ ವಲಸೆ ಕಾರ್ಮಿಕರು ಜಿಲ್ಲೆಗೆ ಮರಳಿದ್ದು, ಅವರಲ್ಲಿ ಮಹಾರಾಷ್ಟ್ರದಿಂದ ಬಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ 1500 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಟೈನ್ಮೆಂಟ್ ಏರಿಯಾದ ವ್ಯಕ್ತಿಯ ಸಾವಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಾಗಿದ್ದು, ಮೊದಲ ಕೊರೋನಾ ಕೇಸ್ ಪತ್ತೆಯಾದ ಕಂಟೈನ್ಮೆಂಟ್ ಜೋನ್​ನಲ್ಲೇ ಈ ವ್ಯಕ್ತಿ ವಾಸಿಸುತ್ತಿದ್ದರು. ಮೇ 18ರವರೆಗೂ ಅವರ ಮನೆಗೆ ನಮ್ಮ ತಂಡ ಭೇಟಿ ನೀಡಿ ಪರೀಕ್ಷೆ ನಡೆಸಿದೆ. ದೇಹದ ಉಷ್ಣಾಂಶ ಸಾಮಾನ್ಯವಾಗಿತ್ತು. ನಿನ್ನೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಎಕ್ಸರೇ ಮಾಡಿದಾಗ ನ್ಯೂಮೊನಿಯಾ ಇರುವುದು ಪತ್ತೆಯಾಗಿತ್ತು. ಕಂಟೈನ್ಮೆಂಟ್ ಜೋನ್​ನಿಂದ ಬಂದ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈಗ ಆ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ, ಈ ವ್ಯಕ್ತಿಗೆ ಲೀವರ್, ಮೆದುಳು ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿದ್ದವು ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button