ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಕಾರ್ಮಿಕರನ್ನು ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಶ್ರಮಿಕ್ ರೈಲು ಶನಿವಾರ(ಮೇ 30) ರಾತ್ರಿ ನಗರದ ರೈಲು ನಿಲ್ದಾಣದಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ತೆರಳಿತು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು, ಸ್ವತಃ ರೈಲು ನಿಲ್ದಾಣಕ್ಕೆ ತೆರಳಿ ಕಾರ್ಮಿಕರಿಗೆ ಊಟ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಚಿತಪಡಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಅಂಗಡಿ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರಿಗೆ ಸೌಲಭ್ಯ ಇಲ್ಲದೇ ಸಂಕಷ್ಟಕ್ಕೆ ಒಳಗಾಗಿದ್ದ ಕರ್ನಾಟಕ ಹಾಗೂ ಗೋವಾ ರಾಜ್ಯಗಳ 1700 ಕಾರ್ಮಿಕರನ್ನು ವಿಶೇಷ ಶ್ರಮಿಕ ರೈಲು ಮೂಲಕ ಗೋರಖ್ ಪುರಕ್ಕೆ ಕಳುಹಿಸಿಕೊಡಲಾಗಿದೆ.
ಕಾರ್ಮಿಕರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆ ಮಾಡುವುದರ ಜತೆಗೆ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗಿದೆ.
ಜಿಲ್ಲಾಡಳಿತ, ಆರೋಗ್ಯ, ಪೊಲಿಸ್ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಪರಿಶ್ರಮದಿಂದ ಕಾರ್ಮಿಕರನ್ನು ಅವರ ತವರು ರಾಜ್ಯಕ್ಕೆ ಕಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಶ್ರಮಿಕ್ ರೈಲು ಇಲ್ಲಿಂದ ಹೊರಟು ಜೂನ್ 1 ರಂದು ಬೆಳಿಗ್ಗೆ 9 ಗಂಟೆಗೆ ಗೋರಖ್ ಪುರ ತಲುಪಲಿದೆ. ಅದೇ ದಿನ ಸಂಜೆ 5 ಗಂಟೆಗೆ ಅಲ್ಲಿಂದ ಮರಳಿ ಹೊರಟು ಜೂನ್ 3 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ತಲುಪಲಿದೆ ಎಂದು ತಿಳಿಸಿದ್ದಾರೆ.
ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ರಾಜು ಚಿಕ್ಕನಗೌಡರ್, ಕಿರಣ ಜಾಧವ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಬಸ್ ಮೂಲಕ ರೈಲು ನಿಲ್ದಾಣಕ್ಕೆ ಕಳುಹಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ