ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತ ಅಪ್ಪಳಿಸಲು ಆರಂಭವಾಗಿದೆ. ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬುಧವಾರ ಮಹಾರಾಷ್ಟ್ರದ ಕರಾವಳಿ ಭಾಗಕ್ಕೆ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ ಬೀಸುವ ಈ ಮಾರುತ ಮುಂಬೈ ಹಾಗೂ ಸುತ್ತಮುತ್ತ ಭಾಗದಲ್ಲಿ ಭಾರೀ ಹಾನಿ ಸೃಷ್ಟಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗೃತೆ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದು, ಅಗತ್ಯ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ಕಾರ್ಯಪ್ರವೃತ್ತವಾಗಿದೆ. ಮುಂಬೈ ಸೇರಿ ಅನೇಕ ಭಾಗಗಳಲ್ಲಿ ಎನ್ಡಿಆರ್ಎಫ್ ತಂಡ ನಿಯೋಜನೆ ಮಾಡಲಾಗಿದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ . ಕರಾವಳಿ ಅಂಚಿನಲ್ಲಿರುವ ಕೆಲವರನ್ನು ಸ್ಥಳಾಂತರ ಮಾಡುವ ಬಗ್ಗೆಯೂ ಎನ್ಡಿಆರ್ಎಫ್ ಚಿಂತನೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ