ಪ್ರಗತಿವಾಹಿನಿ ಸುದ್ದಿ; ಹಾಸನ: ಕೊರೊನಾ ಸೋಂಕಿತ ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಮಲ್ಲಿಪಟ್ಟಣದ ಸರ್ಕಾರಿ ಶಾಲೆಯ ಕೊಠಡಿ ನಂಬರ್ ಒಂದರಲ್ಲಿ ವಿದ್ಯಾರ್ಥಿ ಈಗಾಗಲೇ ಎರಡು ಪರೀಕ್ಷೆ ಬರೆದಿದ್ದಾನೆ. ಮೊದಲ ಪರೀಕ್ಷೆ ವೇಳೆ ವಿದ್ಯಾರ್ಥಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ಆದರೆ ವರದಿ ಬಂದಿರಲಿಲ್ಲ. ಇಂದು ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾಗ ವರದಿ ಬಂದಿದ್ದು, ವಿದ್ಯಾರ್ಥಿಯಲ್ಲಿ ಕೊವಿಡ್ ಪಾಸಿಟೀವ್ ಬಂದಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್ ಮಾಹಿತಿ ನೀಡಿದ್ದು, ಹಾಸನ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಗ್ರಾಮದಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಪರೀಕ್ಷಾ ಕೇಂದ್ರಕ್ಕೆ ಹೋದಾಗ ವಿದ್ಯಾರ್ಥಿಯಲ್ಲಿ ಯಾವುದೇ ಜ್ವರ ಅಥವಾ ಸೋಂಕಿನ ಲಕ್ಷಣ ಕಂಡುಬಂದಿರಲಿಲ್ಲ. ಆದರೆ ಪರೀಕ್ಷೆ ಬರೆದು ವಾಪಸ್ ಬರುವಷ್ಟರಲ್ಲಿ ವಿದ್ಯಾರ್ಥಿಯ ಕೊವಿಡ್ ವರದಿ ಬಂದಿದ್ದು, ಇದರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಯ ಜತೆ ಪರೀಕ್ಷೆ ಬರೆದ 18 ವಿದ್ಯಾರ್ಥಿಗಳನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗೆ ಸೋಂಕು ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆರೋಗ್ಯಾಧಿಕಾರಿಗಳ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುತ್ತಿದ್ದಾರೆ.
ಕೆಲದಿನಗಳ ಹಿಂದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಗಂಟಲು ದ್ರವ ಪರೀಕ್ಷೆ ರಿಸಲ್ಟ್ ಇನ್ನೂ ಬಂದಿರದ ಕಾರಣ ವಿದ್ಯಾರ್ಥಿ ಎಲ್ಲರೊಂದಿಗೆ ಸಹಜವಾಗಿ ಕುಳಿತು ಪರೀಕ್ಷೆ ಬರೆದಿದ್ದಾನೆ. ಕೋವಿಡ್-19 ವರದಿ ಬರೋವರೆಗೂ ವಿದ್ಯಾರ್ಥಿಯನ್ನ ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಬೇಕಿತ್ತು. ಆದರೆ ಆರೋಗ್ಯ ಇಲಾಖೆ ಎಡವಟ್ಟಿನಿಂದಾಗಿ ವಿದ್ಯಾರ್ಥಿ 18 ಜನ ವಿದ್ಯಾರ್ಥಿಗಳ ಜತೆ ಒಂದೇ ಕೊಠಡಿಯಲ್ಲಿ ಪರೀಕ್ಷೆ ಬರೆದಿರುವುದು ಇದೀಗ ಉಳಿದ ವಿದ್ಯಾರ್ಥಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ