ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 6 ರಿಂದ ಮತ್ತೆ ಲಾಕ್ ಡೌನ್ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಕೊರೊನಾ ನಿಯಂತ್ರಣಕ್ಕಾಗಿ ಆರೋಗ್ಯ ಸಚಿವ ಬಿ ಶ್ರೀರಾಮುಲು ನೇತೃತ್ವದಲ್ಲಿ ನಡೆಯುತ್ತಿರುವ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ. ಹೀಗಾಗಿ ಜುಲೈ 6ರಿಂದ ರಾಜ್ಯಾದ್ಯಂತ ಮತ್ತೆ 12 ದಿನಗಳ ಕಾಲ ಲಾಕ್ ಡೌನ್ ಜಾರಿಗೆ ತರಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ.
ಈಗಾಗಲೇ ರಾಜ್ಯದಲ್ಲಿ ಒಂದೇ ದಿನದಲ್ಲಿ ಸಾವಿರಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಅಲ್ಲದೇ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸೋಂಕು ಇನ್ನಷ್ಟು ಉಲ್ಬಣಗೊಳ್ಳಲಿದೆ ಎಂದು ತಜ್ನರು ವರದಿ ನೀಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಪ್ಪಿದಲ್ಲಿ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಜುಲೈ 6ರಿಂದ ಮತ್ತೆ ಲಾಕ್ ಡೌನ್ ಜಾರಿಗೆ ಬರುವ ಸಾಧ್ಯತೆ ಇದೆ.
ಈಗಾಗಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವ ಮಹಾರಾಷ್ಟ್ರ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಜುಲೈ 31ರವರೆಗೆ ಅಂದರೆ ಮತ್ತೆ ಒಂದು ತಿಂಗಳ ಕಾಲ ಲಾಕ್ ಡೌನ್ ಮುಂದುವರಿಕೆ ಮಾಡಲು ಅಲ್ಲಿನ ಸರ್ಕಾರ ನಿರ್ಧರಿಸಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ