ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಈ ನಡುವೆ ಸಮುದಾಯಕ್ಕೆ ಹರಡಿರುವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡಗಳು ಹೆಚ್ಚುತ್ತಿವೆ.
ರಾಜ್ಯದ ಶಕ್ತಿಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಸಿಬ್ಬಂದಿಗಳಲ್ಲೂ ಕೊರೊನಾ ಸೋಂಕು ದೃಢಪಟ್ಟಿದ್ದು, ಪೊಲೀಸ್ ಠಾಣೆಗಳು, ಕಂದಾಯ ಅಧಿಕಾರಿಗಳ ಕಚೇರಿಗೂ ಸೋಂಕು ಹರಡಿದೆ. ಅಲ್ಲದೇ ರಾಜ್ಯದ ಮೂಲೆ ಮೂಲೆಗಳಲ್ಲಿ ಸೋಂಕು ವ್ಯಾಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದೂ ಕೂಡ ಅಧಿಕಾರ ಜತೆ ಗಂಭೀರ ಚರ್ಚೆ ನಡೆಸಿದ್ದಾರೆ. ಈ ವೇಳೆ ಹಲವರು ಲಾಕ್ ಡೌನ್ ಜಾರಿ ಮಾಡುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಆರ್ಥಿಕತೆಯ ದೃಷ್ಟಿಯಿಂದ ಮತ್ತೆ ಲಾಕ್‌ಡೌನ್ ಜಾರಿ ಮಾಡುವುದು ಕಷ್ಟಸಾಧ್ಯ. ಆದರೆ, ಸೋಂಕು ಹೆಚ್ಚಳವಾಗುತ್ತಿರುವ ಪ್ರಮಾಣವನ್ನು ಗಮನಿಸಿದರೆ, ಕಠಿಣ ನಿರ್ಬಂಧಗಳನ್ನು ಕೈಗೊಳ್ಳುವ ಅನಿವಾರ್ಯತೆಯಿದೆ. ರಾತ್ರಿ ಕರ್ಫ್ಯೂ ಮತ್ತಷ್ಟು ಬಿಗಿಗೊಳಿಸುವ ಬಗ್ಗೆ ಕೂಡ ಚರ್ಚೆ ನಡೆದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ನಂತರ ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ನಿರ್ದಿಷ್ಟ ನಿಯಮಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಟೆಸ್ಟಿಂಗ್ ಮತ್ತು ಟ್ರೀಟ್ಮೆಂಟ್ ಪ್ರೊಟೋಕಾಲ್ ಅನ್ನು ಮತ್ತಷ್ಟು ಕಠಿಣಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ