ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಒಂದೆಡೆ ಕೊರೊನಾ ಸಂಕಷ್ಟ ಹೆಚ್ಚಿದ್ದು, ದಿನೇ ದಿನೇ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ಲೆಕ್ಕವಿಲ್ಲದಷ್ಟಾಗುತ್ತಿದೆ. ಈ ನಡುವೆ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಕೂಡ ಆರಂಭವಾಗಿದೆ.
ಅಸ್ಸಾಂನಲ್ಲಿ ಭಾರೀ ಪ್ರವಾಹವುಂಟಾಗಿದ್ದು, ಕಳೆದ 24 ಗಂಟೆಯಲ್ಲಿ ತಿನ್ಸುಕಿಯಾ ಮತ್ತು ಮೊರಿಂಗಾವ್ ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಹಲವರು ಸಾವನ್ನಪ್ಪಿದ್ದಾರೆ. ಈ ಮೂಲಕ ಅಸ್ಸಾಂ ನಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಅಸ್ಸಾಂನ 18 ಜಿಲ್ಲೆಗಳಲ್ಲಿ ಪ್ರವಾಹದ ಆರ್ಭಟ ಜೋರಾಗಿದೆ. ಇದರಿಂದ ಸುಮಾರು 11 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಮಾಜಿ, ಲಾಕೀಂಪುರ್, ಬಿಸ್ವನಾಥ್, ಡರ್ರಾಂಗ್, ನಾಲ್ಬಾರಿ, ಬಾರ್ಪೆಟಾ ಸೇರಿದಂತೆ 18 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. 1,412 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 53,348 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ.
ಪ್ರವಾಹದ ಹೊಡೆತಕ್ಕೆ ಸಿಲುಕಿರುವ 6,531 ಜನರಿಗೆ 171 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮಾತನಾಡಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ