ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾ ಮಳೆಗೆ ಗಡಿ ಜಿಲ್ಲೆ ಬೆಳಗಾವಿ ತತ್ತರಿಸಿದ್ದು, ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 6 ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ.
ಮಹಾರಾಷ್ಟ್ರದಲ್ಲಿ ಆಗುತ್ತಿರೋ ಮಳೆಯನ್ನು ಕಂಡು ಜನರಲ್ಲಿ ಮತ್ತೆ ಪ್ರವಾಹದ ಆತಂಕ ಹೆಚ್ಚಾಗಿದೆ. ದೂಧಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ ಮುಳುಗಡೆಯಾಗಿದೆ.
ಕೃಷ್ಣಾ ನದಿಗೆ 65 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವು ಹೆಚ್ಚಾಗಿದೆ. ಇದರಿಂದ ಮಳೆ ಹೀಗೆ ಮುಂದುವರಿದರೆ ಮತ್ತೆ ಪ್ರವಾಹವುಂಟಾಗುವ ಭೀತಿ ಜಿಲ್ಲೆಯ ಜನರಲ್ಲಿ ಹೆಚ್ಚಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರದ ಮಳೆ ಮುಂದುವರಿದಿದೆ. ಕರಾವಳಿ ಭಾಗದ ಅಂಕೋಲ ಭಾಗದಲ್ಲಿ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆಯ ಅಬ್ಬರಕ್ಕೆ ವಿದ್ಯುತ್ ಕಂಬ ಉರುಳಿ ಹಸುಗಳು ಸಾವನ್ನಪ್ಪಿವೆ. ಉಡುಪಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು. ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ