
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕೊರೋನಾದಂತಹ ಸಂಕಷ್ಟದ ಕಾಲದಲ್ಲಿ ಜಾರಿಮಾಡಲಾಗಿರುವ ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಈ ದಿನ ಕರ್ನಾಟಕದ ಇತಿಹಾಸಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರೈತರು ಹಾಗೂ ವಿಪಕ್ಷ ನಾಯಕರ ವಿರೋಧದ ನಡುವೆಯೂ ಕೊರೋನಾ ಲಾಕ್ಡೌನ್ ಸಂದರ್ಭದಲ್ಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು..? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಈ ಬಗ್ಗೆ ಹೋರಾಟ ಮಾಡುವುದನ್ನ ಬಿಟ್ಟು ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ. ರೈತರ ಮರಣ ಶಾಸನ ಬರೆಯಲು ಲಾಕ್ಡೌನ್ ವೇಳೆಯನ್ನು ಉಪಯೋಗಿಸಿ ಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.