ಕಂಟೈನರ್ ನಲ್ಲಿ ಕೋವಿಡ್ ಐಸಿಯು!

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಇವಗಳನ್ನು ’ಮೊಬೈಲ್ ಐಸಿಯು’ಗಳೆಂದೂ ಕರೆಯಬಹುದಾಗಿದೆ.
ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿ ಶನಿವಾರ, ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.
ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.

ವಿನೂತನ ಪ್ರಯೋಗ ಎಂದ ಡಿಸಿಎಂ:

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಸಿಜೆಗೆ 10 ಕಂಟೈನರ್:

ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಲ್ಲಿ 5 ಹಾಸಿಗೆಗಳು ಇರುತ್ತವೆ. ರಿನ್ಯಾಕ್ ಕಂಪನಿ ತಮ್ಮದೇ ವೆಚ್ಚದಲ್ಲಿ ಎಕ್ಸ್’ಕ್ಲೂಸೀವ್ ಆಗಿ ನಮಗಾಗಿಯೇ ಇವುಗಳನ್ನು ತಯಾರಿಸಿ ಕೊಟ್ಟಿದೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಕೇವಲ 10ರಿಂದ 15 ದಿನಗಳಲ್ಲಿ ಇಷ್ಟು ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದರಲ್ಲಿ ಏನೇನಿರುತ್ತದೆ?:

ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ.  ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮೆರಾ ಕೂಡ ಇದ್ದು, ಆನ್’ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button