Kannada NewsLatest

ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯಪ್ರವೃತ್ತರಾಗಿ – ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾದಂತಹ ಸಂದರ್ಭದಲ್ಲೂ ಬಿಜೆಪಿಯಿಂದ ಕ್ಷುಲ್ಲಕ ರಾಜಕಾರಣ ನಡೆಯುತ್ತಿದೆ. ಕರ್ನಾಟಕದ ನಂತರ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲೂ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ಸರಕಾರಗಳನ್ನು ಕೆಡವಿ ಬಿಜೆಪಿ ಅಧಿಕಾರಕ್ಕೇರಲು ಹುನ್ನಾರ ನಡೆಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂದು ಹಿರೇಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿನ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೊರೋನಾದಂತಹ ಸಂಕಷ್ಟದಲ್ಲೂ ಹಣ ಮಾಡಲು ಹೊರಟಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಯಾವ ಸಚಿವರೂ ಸಹಕಾರ ನೀಡುತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ಅವರು ವಿನಂತಿಸಿದರು.

ನಾನು ನನಗೆ ಸಿಕ್ಕ ಅಧಿಕಾರಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನ ಇರಬಹುದು, ಬೆಳಗಾವಿ ಜಿಲ್ಲಾ ಅಧ್ಯಕ್ಷ ಸ್ಥಾನ ಇರಬಹುದು. ಈಗಿನ ಶಾಸಕ ಸ್ಥಾನ ಇರಬಹುದು. ಎಲ್ಲವನ್ನೂ ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂದು ಹೆಬ್ಬಾಳಕರ್, ಕಾರ್ಯಕರ್ತರ ಸಹಕಾರದಿಂದ ಎಲ್ಲವೂ ಸಾಧ್ಯವಾಗಿದೆ ಎಂದರು.

ರಾಜ್ಯದಲ್ಲಿ ಈಗ ಡಿ.ಕೆ.ಶಿವಕುಮಾರ ಕಾಂಗ್ರೆಸ್ ನೇತೃತ್ವ ವಹಿಸಿಕೊಂಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಪಕ್ಷ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರುವುದರಲ್ಲಿ ಯಾವುದೇ ಸಂದೇಹವಿಲ್ಲ. ಹಾಗಾಗಿ ನಾವು ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದೂ ಅವರು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಅಡಿವೇಶ ಇಟಗಿ ಮೊದಲಾದವರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button