Latest

ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಇದುವರೆಗೂ 13 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸಲಿದ್ದು, ಸ್ಥಳೀಯರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿದ್ದು ಅಂದು ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಕರಾವಳಿ, ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಇನ್ನು ಚಿಕ್ಕಮಗಳೂರಿನಲ್ಲಿ ಚಾರ್ಮಾಡಿ ಘಾಟ್​ ಬಂದ್ ಆಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ತುಂಗಾ, ಭದ್ರಾ, ಶರಾವತಿ ಅಘನಾಶಿನಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button