Kannada NewsLatest

ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಹೈಟೆಕ್ ಶಾಲೆ ಮಾಡುವ ಭರವಸೆ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ;   ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ಜನಪ್ರತಿನಿಧಿಗಳಿಗೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಸಚಿವ ಜಾರಕಿಹೊಳಿ‌ ಮುಂದಡಿ ಇರಿಸಿದ್ದಾರೆ.

ಏನೀ ಯೋಜನೆ:

ರಾಜ್ಯದಲ್ಲಿ 43,447 ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು 3,029 ಪ್ರೌಢಶಾಲೆಗಳಿದ್ದು, ಶಿಕ್ಷಣ ಇಲಾಖೆಗೆ ವಾರ್ಷಿಕ ನೀಡಲಾಗುವ ಅನುದಾನದಲ್ಲಿ ಶೇ.90ರಷ್ಟು ಶಿಕ್ಷಕರ ಭತ್ಯೆಗೆ ಖರ್ಚಾಗುತ್ತಿದ್ದು, ಇನ್ನುಳಿದ ಶೇ.10ರಷ್ಟು ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿ ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅನುವಾಗುವಂತೆ ರಾಜ್ಯ ಸರ್ಕಾರ ಶಾಲಾ ದತ್ತು ಯೋಜನೆಯನ್ನು ಹೊಂದಿದ್ದು, ಹತ್ತು ಹಲವು ಉದ್ಯಮಿಗಳು ಈಗಾಗಲೇ ಹಲವು ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ.

ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡವರ ಸಹಾಯದಿಂದ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಜೊತೆ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಮಾಡುವುದು ಸರ್ಕಾರದ ಆಲೋಚನೆ ಆಗಿದ್ದು, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಸರ್ಕಾರದ ಈ ಯೋಜನೆ ಬಗ್ಗೆ ಅರಿತ ಸಚಿವ ರಮೇಶ್ ಜಾರಕಿಹೊಳಿ ಅವರು, ತಮ್ಮ ಕ್ಷೇತ್ರದ ಶಾಲೆಗಳ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ಹಿಂದುಳಿದ ಮತ್ತು ಅಭಿವೃದ್ಧಿ ಕುಂಠಿತವಾಗಿರುವ ಶಾಲೆಗಳನ್ನು ಗುರ್ತಿಸಿದ ಕೂಡಲೇ ಅವುಗಳನ್ನು ದತ್ತು ಪಡೆದಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪದಾಳದ ಮತ್ತು ಸುಲಧಾಳ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದುಕೊಂಡಿರುವ ಸಚಿವರು ಈ ಶಾಲೆಗಳ ಸಮಗ್ರ ಅಭಿವೃದ್ಧಿಗೆ ರೂಪು ರೇಷೆ ಸಿದ್ಧಪಡಿಸುವತ್ತ ಗಮನ ಹರಿಸಿದ್ದಾರೆ.

ಈ ವೇಳೆ ಮಾತನಾಡಿರುವ ಸಚಿವ ರಮೇಶ್ ಜಾರಕಿಹೊಳಿ, ಉತ್ತಮ ಶಿಕ್ಷಣದಿಂದ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂಬುದರಲ್ಲಿ ನಂಬಿಕೆ ಹೊಂದಿರುವ ನಾನು, ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ಸಾಗಿ ಬಂದಿದ್ದು, ಅವರ ಪ್ರಮುಖ ಆಶಯಗಳಲ್ಲಿ ಒಂದಾಗಿರುವ “ಸರ್ವರಿಗೂ ಶಿಕ್ಷಣ” ನೀಡಬೇಕೆಂಬ ಮಹದಾಸೆಯಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಶಾಲೆಗಳನ್ನು ಯಾವುದೇ ಹೈಟೆಕ್ ಶಾಲೆಗಿಂತ ಕಡಿಮೆ ಇಲ್ಲದಂತೆ ಮಾದರಿ ಶಾಲೆಗಳನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button