ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ, ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಹೋರಾಟಕ್ಕೆ ರೈತರು ಬೆಂಬಲ ವ್ಯಕ್ತಪಡಿಸಿದ್ದು, ರಾಜಧಾನಿ ಬೆಂಗಳೂರಿಗೆ ರಾಜ್ಯದ ಮೂಲೆ ಮೂಲೆಗಳಿಂದ ರೈತರು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ರೈತರ ಪ್ರತಿಭಟನೆ ಬೆನ್ನಲ್ಲೇ ರಾಜಧಾನಿಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. 10:30ಕ್ಕೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಮೂಲಕವಾಗಿ ಕಾಂಗ್ರೆಸ್ ಹಾಗೂ ರೈತರು ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ರೈತರು ಭಾಗವಹಿಸಲಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ರಾಜಭವನ ಚಲೋಗೆ ಅನುಮತಿ ನೀಡಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೊಲೀಸರು ರಾಜಭವನ ಚಲೋ ತಡೆದರೆ ಅದೇ ಸ್ಥಳದಲ್ಲಿ ಕುಳಿತು ಪ್ರತಿಭಟನೆ ನಡೆಸಿ. ಯಾವುದೇ ಒತ್ತಡಕ್ಕೂ ಮಣಿಯುವ, ಹೆದರುವ ಅಗತ್ಯವಿಲ್ಲ ಎಂದು ಕರೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ