Kannada NewsLatest

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ ಜನರಿಗೆ ಸಾರಿಗೆ ವ್ಯವಸ್ಥೆ ಮತ್ತಿತರ ಮೂಲಸೌಕರ್ಯವನ್ನು ಒದಗಿಸುವ ಮೂಲಕ ಲಸಿಕಾಕರಣ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ರೀತಿಯ ಕ್ರಮವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.

ಸೋಂಕಿತರ ಸಂಪರ್ಕಿತರನ್ನು ಗುರುತಿಸಬೇಕು; ಪರೀಕ್ಷಿಸಬೇಕು; ಚಿಕಿತ್ಸೆ ಒದಗಿಸಬೇಕು ಇದರ ಜತೆಗೆ ಉಳಿದವರಿಗೆ ಲಸಿಕೆ ನೀಡಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಅದೇ ರೀತಿ ಆರೋಗ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ಕೂಡ ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದರು.

ಕಂದಾಯ, ಪೊಲಿಸ್, ಆರೋಗ್ಯ ಹಾಗೂ ಜಿಲ್ಲಾ ಪಂಚಾಯತ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಕೋವಿಡ್ ವರದಿ ಪರಿಶೀಲಿಸಲು ಸೂಚನೆ:

ನೆರೆಯ ಮಹಾರಾಷ್ಟ್ರದಿಂದ ಜಿಲ್ಲೆಯ ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಮಾರ್ಗಸೂಚಿ ಪ್ರಕಾರ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ವರದಿಯನ್ನು ಹೊಂದಿರಬೇಕು.

ಬಸ್ ಮೂಲಕ ಆಗಮಿಸುವ ಪ್ರಯಾಣಿಕರ ವರದಿಯನ್ನು ಬಸ್ ನಿರ್ವಾಹಕರು ಪರಿಶೀಲಿಸುವುದರಿಂದ ಪರೀಕ್ಷಾ ವರದಿ ಇಲ್ಲದವರನ್ನು ತಡೆಯಬಹುದು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಲಸಿಕೆ ಪಡೆಯಲು ಮುಂದಾಗುವ ಹಿರಿಯ ನಾಗರಿಕರನ್ನು ಗುರುತಿಸಿ ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ನಿಗದಿತ ಗುರಿಯ ಪ್ರಕಾರ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು, ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ಮಾರ್ಗಸೂಚಿ ಪ್ರಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ನಗರ ಪ್ರದೇಶದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ದರ್ಶನ್ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ಐ.ಪಿ.ಗಡಾದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ ಮತ್ತಿತರರು ಉಪಸ್ಥಿತರಿದ್ದರು. ಎಲ್ಲ ತಾಲ್ಲೂಕುಗಳ ತಹಶೀಲ್ದಾರರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button