Kannada NewsLatest

ಹುಷಾರ್, ಬೆಳಗಾವಿಯಲ್ಲಿ ಮಾರ್ಷಲ್ ಗಳ ನೇಮಕ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಉದ್ಧೇಶದಿಂದ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ‌.ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ಮೂರು ದಿನಗಳ‌ ಕಾಲ ಜಾಗೃತಿಯನ್ನು ಮೂಡಿಸಲಾಗುವುದು. ಇದಾದ ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲೂ ಮಾರ್ಷಲ್ ಗಳ ನೇಮಕ:

ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೇ ತಿರುಗಾಡುವವರು ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರನ್ನು ಗುರುತಿಸಿ ದಂಡ ವಿಧಿಸಲು ಅನುಕೂಲವಾಗುವಂತೆ ಬೆಂಗಳೂರು ನಗರದ ಮಾದರಿಯಲ್ಲಿ ಮಾರ್ಷಲ್ ಗಳನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಾರ್ಗಸೂಚಿ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜತೆಗೆ ಮಾಸ್ಕ್ ಗಳನ್ನು ಕೂಡ ಅವರದೇ ದುಡ್ಡಿನಲ್ಲಿ ನೀಡಲು ಕ್ರಮಕೈಗೊಳ್ಳಲಾಗುವುದು.

ಇದಕ್ಕಾಗಿ ಗೃಹರಕ್ಷಕದ ದಳದ ಸದಸ್ಯರನ್ನು ಬಳಸಿಕೊಳ್ಳಲಾಗುವುದು. ದಂಡ ವಿಧಿಸುವುದಕ್ಕಿಂತ ಮುಂಚೆ ನಿಯಮ ಪಾಲನೆ ಕುರಿತು ಮೂರು ದಿನಗಳ ಕಾಲ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹೆಚ್ಚು ಜನಸಂದಣಿ ಕಂಡುಬರುವುದರಿಂದ ಕೋವಿಡ್-19 ಹರಡುವಿಕೆ ಸಾಧ್ಯತೆ ಹೆಚ್ಚಾಗಿರುತ್ತದೆ. ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಆರಂಭಿಕ ಹಂತದಲ್ಲಿ ಜಿಲ್ಲೆಯ ಎಲ್ಲ ನಗರ ಪ್ರದೇಶಗಳಲ್ಲಿ ದಂಡ ಪ್ರಕ್ರಿಯೆಯನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ.

ಸಾರ್ವಜನಿಕರು ಕೋವಿಡ್-19 ಮಾರ್ಗಸೂಚಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

6ನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button