ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಕೋವಿಡ್-19 ಮಾರ್ಗಸೂಚಿ ಪ್ರಕಾರ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಮತ ಎಣಿಕೆಗೆ ಹೆಚ್ಚುವರಿ ಕೊಠಡಿಗಳನ್ನು ಕಲ್ಪಿಸಲಾಗುತ್ತಿದ್ದು, ಪ್ರತಿ ಕೊಠಡಿಯಲ್ಲಿ ಏಳು ಟೇಬಲ್ ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಮೇ 2 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ (ಏ.14) ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆಯನ್ನು ಅವರು ಪರಿಶೀಲಿಸಿದರು.
ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಮತಕ್ಷೇತ್ರವಾರು ಮತ ಎಣಿಕೆಗೆ ಕೊಠಡಿಗಳನ್ನು ಗುರುತಿಸಿ ಎಲ್ಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಮೊದಲು ಪ್ರತಿ ವಿಧಾನಸಭಾ ಕ್ಷೇತ್ರವಾರು ಒಂದು ಕೊಠಡಿಯನ್ನು ನಿಗದಿಪಡಿಸಿ ಪ್ರತಿ ಕೊಠಡಿಯಲ್ಲಿ ಹದಿನಾಲ್ಕು ಟೇಬಲ್ ಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಹೆಚ್ಚುವರಿ ಕೊಠಡಿಯನ್ನು ಒದಗಿಸುವ ಮೂಲಕ ಪ್ರತಿ ಕೊಠಡಿಯಲ್ಲಿ ಏಳು ಟೇಬಲ್ ಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೀಗ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಮತ ಎಣಿಕೆ ಕೊಠಡಿಗಳ ಸಿದ್ಧತೆಗಳ ಕುರಿತು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಯೋಗೇಶ್ವರ್, ಸಹಾಯಕ ಚುನಾವಣಾಧಿಕಾರಿಗಳಾದ ಜಗದೀಶ್, ಸಿ.ಬಿ.ಕೊಡ್ಲಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಮತ್ತಿತರರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ, ಪ್ರಿಯಾಂಕಾ, ಸೋನಿಯಾರನ್ನು ಲೀಡರ್ ಗಳೆನ್ನಲಾಗದು; ಸಿ.ಟಿ ರವಿ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ