Kannada NewsLatest

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಗೆ ಪ್ರತಿದಿನ ಪೂರೈಕೆಯಾಗುತ್ತಿದ್ದ 16 ಕೆ.ಎಲ್‌. ಆಕ್ಸಿಜನ್ ಪ್ರಮಾಣವನ್ನು ಸರಕಾರ ಇದೀಗ 24 ಕೆ.ಎಲ್. ಗೆ ಹೆಚ್ಚಿಸಿದೆ ಎಂದು ಉಪ ಮುಖ್ಯಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಆಕ್ಸಿಜನ್ ಪ್ರಮಾಣ ಹೆಚ್ಚಳದಿಂದ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ರೆಮಿಡಿಸಿವಿರ್ ಪೂರೈಕೆಗೆ ಕ್ರಮ:

ಅದೇ ರೀತಿ ಜಿಲ್ಲೆಯ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಗೆ ಅನುಸಾರ ರೆಮಿಡಿಸಿವಿರ್ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಒದಗಿಸಬೇಕು ಎಂದು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿಕೊಳ್ಳಲಾಗಿದ್ದು, ಮೂರು ದಿನಗಳಲ್ಲಿ ರೆಮಿಡಿಸಿವಿರ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಗೆ ನಾಲ್ಕು ಆಕ್ಸಿಜನ್ ಘಟಕ‌ ಸ್ಥಾಪನೆಗೆ ಮನವಿ:

ಭಾರತ ಸರಕಾರವು 32 ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಅದರಲ್ಲಿ ನಾಲ್ಕು ಘಟಕಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಬೇಕು ಎಂದು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರಿಗೆ ಮನವಿಯನ್ನು ಮಾಡಿಕೊಂಡಿದ್ದೇನೆ. ನಾಲ್ಕು ಘಟಕಗಳನ್ನು ಬೆಳಗಾವಿಗೆ ನೀಡುವುದಾಗಿ ಅವರು ಭರವಸೆಯನ್ನು ನೀಡಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಇತ್ತೀಚೆಗೆ ಅಪಘಾತಕ್ಕೀಡಾಗಿರುವ ಆಕ್ಸಿಜನ್ ಟ್ಯಾಂಕರ್ ಕೂಡ ಕೆಲವೇ ದಿನಗಳಲ್ಲಿ ದುರಸ್ತಿಗೊಂಡು ಆಕ್ಸಿಜನ್ ಸಾಗಾಣಿಕೆಗೆ ಸಿದ್ಧಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಮನವಿ:

ಕೋವಿಡ್-19 ಸೋಂಕು ತಡೆಗಟ್ಟುವ ಉದ್ಧೇಶದಿಂದ ಸರಕಾರ ಪ್ರಕಟಿಸಿರುವ 14 ದಿನಗಳ ಹೊಸ ಮಾರ್ಗಸೂಚಿಯನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಾರ್ವಜನಿಕರು ಹಾಗೂ ವಾಹನಗಳ ಅನಗತ್ಯ ಓಡಾಟವನ್ನು ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.‌ ಸಾರ್ವಜನಿಕರು ಕೂಡ ಇದಕ್ಕೆ ಕೈಜೋಡಿಸಬೇಕು ಎಂದು ಉಪ ಮುಖ್ಯಮಂತ್ರಿಗಳೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ವಿನಂತಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button