ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಮಹತ್ವದ ಸಭೆ ನಡೆಯಲಿದ್ದು, ಲಾಕ್ ಡೌನ್ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿ ಇಂದಿಗೆ ಒಂದು ವಾರವಾಗಿದ್ದು, ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಕೊಂಚ ತಗ್ಗಿದೆಯಾದರೂ ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಲಾಕ್ ಡೌನ್ ಬಳಿಕ ಜಿಲ್ಲಾವಾರು ಕೊರೊನಾ ಪರಿಸ್ಥಿತಿ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರು ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸಿಎಂ ಗೆ ಮನವಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಲಾಕ್ ಡೌನ್ ಜಾರಿಯಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಲಿದ್ದು, ಈ ಬಗ್ಗೆಯೂ ಚರ್ಚೆ ನಡೆಯಲಿದೆ. ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ತಿಂಗಳಾಂತ್ಯದವರೆಗೂ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ಸಿಎಂ ನಿರ್ಧರಿಸಲಿದ್ದಾರಾ ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ