ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಮಹತ್ವದ ಸಭೆ ನಡೆದಿದೆ.
ಸಭೆಯಲ್ಲಿ ಭಾಗಿಯಾಗಿರುವ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳ ಹಿತದೃಷ್ಟಿ ಜೊತೆ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕು. ಇದು ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳು ಸೇರ್ಪಡೆಯಾಗುವ ಹಂತವಾಗಿರುವುದರಿಂದ ದ್ವಿತೀಯ ಪಿಯು ಪರೀಕ್ಷೆ ಮಹತ್ವದ್ದಾಗಿದೆ. ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ಪರೀಕ್ಷೆ ನಡೆಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಅದೇ ಮಾದರಿಯಲ್ಲಿ ಪರೀಕ್ಷೆ ನಡೆಸಬಹುದು. ಹೀಗಾಗಿ ಪರೀಕ್ಷಾ ಪ್ರಕ್ರಿಯೆ ಸರಳಿಕರಣ ಮಾಡಿಯಾದರೂ ದ್ವಿತಿಯ ಪಿಯು ಪರೀಕ್ಷೆ ನಡೆಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ಬಹುತೇಕ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದಾಗಿ ಮುಂಜಾಗೃತಾ ಕ್ರಮ ಕೈಗೊಂಡು ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಒಟ್ಟಾರೆ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಇಂದು ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಕೊರೋನಾ ನಿಯಂತ್ರಣಕ್ಕೆ ಹೊಸ ಪ್ರಯೋಗಕ್ಕಿಳಿದ ಶಾಸಕ ಅಭಯ ಪಾಟೀಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ