ಗೂಗಲ್ ಮೀಟ್ ಮೂಲಕ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಗೂಗಲ್ ಮೀಟ್ ಮೂಲಕ ಸಂವಾದ ನಡೆಸಿದರು.
ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಬಿಜೆಪಿ ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 19 ಮಕ್ಕಳು ಸಂವಾದದಲ್ಲಿ ಭಾಗವಹಿಸಿದ್ದರು. ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ನಿಜಕ್ಕೂ ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ‘ಬಾಲ ಸೇವಾ’ ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.
ಶಾಕಿಂಗ್! ಚೀನಾ ಬೀಜ ಬರಲಿದೆ: ಭೂಮಿಯನ್ನೆ ಬಂಜರು ಮಾಡಲಿದೆ; ಇಂತಹ ಬೀಜ ಬಂದರೆ ಸುಟ್ಟು ಹಾಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ