ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶನಿವಾರ ಸಂಜೆ ಮಹತ್ವದ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪಕ್ಕದ ರಾಜ್ಯಗಳಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು 3ನೇ ಅಲೆ ದೊಡ್ಡ ಮಟ್ಟದಲ್ಲಿ ಅಪ್ಪಳಿಸಬಹುದು ಎನ್ನುವ ತಜ್ಞರ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅಗಸ್ಟ್ 16ರಿಂದಲೇ ಕಠಿಣ ನಿಯಮ ಜಾರಿಯಾಗುವುದು ಬಹುತೇಕ ಪಕ್ಕಾ ಆಗಿದೆ.
ಶನಿವಾರ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಮಹತ್ವದ ಸಭೆ ಕರೆದಿದ್ದಾರೆ.
ಸೆಪ್ಟಂಬರ್ ತಿಂಗಳ ಮಧ್ಯಭಾಗದಲ್ಲಿ ರಾಜ್ಯದಲ್ಲಿ ಕೊರೋನಾ 3ನೇ ಅಲೆ ದೊಡ್ಡ ಮಟ್ಟದಲ್ಲಿ ಕಾಣಿಸಿಕೊಳ್ಳಲಿದೆ ಎನ್ನುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಜೊತೆಗೆ ಈ ಬಾರಿ ಮಕ್ಕಳ ಮೇಲೆ ದೊಡ್ಡ ದಾಳಿ ಮಾಡಬಹುದು ಎನ್ನುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸರಕಾರ ಗಂಭೀರ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. 2ನೇ ಅಲೆಯ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯ ಈ ಬಾರಿ ಆಗಬಾರದು ಎಂದು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ದಿನ ಇದ್ದು ಅಲ್ಲಿನ ಪರಿಸ್ಥಿತಿಯನ್ನೂ ಕಂಡು ಬಂದಿದ್ದಾರೆ.
ಈ ಬಾರಿ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ. ಬೆಂಗಳೂರನ್ನು, ಕರ್ನಾಟಕವನ್ನು ಕೊರೋನಾದಿಂದ ಪಾರುಮಾಡಲು ಏನೇನು ಟಫ್ ರೂಲ್ಸ್ ತರಬಹುದು ಎನ್ನವು ಕುರಿತು ನಾಳೆಯ ಸಭೆೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಆರ್.ಅಶೋಕ ತಿಳಿಸಿದ್ದಾರೆ.
ಬೆಂಗಳೂರು ಬಿಬಿಎಂಪಿ ಆಯುಕ್ತರು ಕೂಡ ಇದೇ ಸುಳಿವು ನೀಡಿದ್ದಾರೆ. ಬಿಬಿಎಂಪಿಯಲ್ಲಿ 10ಕ್ಕೂ ಹೆಚ್ಚು ಮಕ್ಕಳ ತಜ್ಞರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
ರಾಜ್ಯದಲ್ಲಿರುವ ಐಸಿಯು ಬೆಡ್ ಗಳಲ್ಲಿ ಶೇ. 50ರಷ್ಟನ್ನು ಮಕ್ಕಳ ಐಸಿಯು ಆಗಿ ಪರಿವರ್ತಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ವಿಪರೀತವಾಗಿ ಕೊರೋನಾ ಸೋಂಕು ಹೆಚ್ಚುತ್ತಿದೆ. ರಾಜ್ಯದ ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಕೇರಳದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.
ಈ ಎಲ್ಲ ಹಿನ್ನೆಲೆಯಲ್ಲಿ ಶನಿವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಭೆ ಮಹತ್ವ ಪಡೆದಿದೆ. ರಾಜ್ಯದಲ್ಲಿ ಕಠಿಣ ಕ್ರಮ ಘೋಷಿಸುವ ಸಾಧ್ಯತೆ ನಿಚ್ಛಳವಾಗಿದೆ. ಆಗಸ್ಟ್ 16ರಿಂದಲೇ ಕಠಿಣ ನಿಯಮ ಜಾರಿಯಾಗಬಹುದು. ಇದಕ್ಕೆ ಎಲ್ಲರೂ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ.
ಈ ಮಧ್ಯೆ, ಆ.23ರಿಂದ ಪ್ರೌಢ ಶಾಲೆ ಮತ್ತು ಕಾಲೇಜು ಆರಂಭ ಘೋಷಿಸಲಾಗಿದ್ದು, ಅದು ಮುಂದಕ್ಕೆ ಹೋದರೂ ಆಶ್ಚರ್ಯವಿಲ್ಲ. ಸೆ.1ರಿಂದ ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ ತಿಳಿಸಿದ್ದು, ಅದಕ್ಕೂ ಬ್ರೇಕ್ ಬೀಳಬಹುದು.
ಸೆಪ್ಟಂಬರ್ ಮೊದಲ ವಾರದಲ್ಲಿ ಆರಂಭವಾಗಲಿರುವ 3ನೇ ಅಲೆ ಸೆಪ್ಟಂಬರ್ ಮಧ್ಯ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಏರಬಹುದು. ಇದು ಸೆಪ್ಟಂಬರ್ ಅಂತ್ಯದವರೆಗೂ ದೊಡ್ಡ ಮಟ್ಟದ ಆತಂಕ ಸೃಷ್ಟಿಸಬಹುದು.
ಹಾಗಾಗಿ ಶನಿವಾರ ನಡಂಯಲಿರುವ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ನಾಳೆ ಸಂಜೆ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ; ಟಫ್ ರೂಲ್ಸ್ ಭವಿಷ್ಯ ನಿರ್ಧಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ