ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದರು.
ವಾರದಲ್ಲಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಇದೆ. ದಿನಕ್ಕೆ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ. ಬೃಹತ್ ಲಸಿಕೆ ಕಾರ್ಯಕ್ರಮದಂದು ಕೇಂದ್ರ ಸರ್ಕಾರ ಒಂದೇ ದಿನ 2 ರಿಂದ 3 ಕೋಟಿ ಲಸಿಕೆ ನೀಡುವ ಉದ್ದೇಶವಿದ್ದು, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇದೆ. ಲಸಿಕೆ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಒದಗಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಸೂಕ್ತ ಸಂಖ್ಯೆಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ತಿಳಿಸಿದರು. ಮುಂಚಿತವಾಗಿಯೇ ಲಸಿಕೆ ದಾಸ್ತಾನು ಪಡೆದು, ಲಸಿಕಾ ಕೇಂದ್ರಗಳಿಗೆ ತಲುಪಿಸಿ, ವಿಶೇಷ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೇಳಿದರು.
ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ. 71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ. ರಾಜ್ಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಇತರ ಜಿಲ್ಲೆಗಳಲ್ಲಿಯೂ ರಾಜ್ಯದ ಸರಾಸರಿ ಪ್ರಮಾಣದ ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು.
ಬೃಹತ್ ಲಸಿಕಾ ಕಾರ್ಯಕ್ರಮಕ್ಕೆ ಸೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.
ಅವಸರದಿಂದ ದೇವಸ್ಥಾನ ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ