ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ನಡುವೆ ಮಕ್ಕಳಲ್ಲಿ ವೈರಲ್ ಜ್ವರ ಹಾಗೂ ನ್ಯೂಮೋನಿಯಾ ಸಮಸ್ಯೆಗಳು ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಕ್ಕಳಲ್ಲಿ ಕಾಯಿಲೆಗಳು ಹೆಚ್ಚುತ್ತಿದ್ದು, ವೈರಲ್ ಫೀವರ್, ನ್ಯುಮೋನಿಯಾ, ಡೆಂಗ್ಯೂ ದಂತಹ ಸಮಸ್ಯೆಗಳಿಂದ ಮಕ್ಕಳು ಬಳಲುತ್ತಿದ್ದಾರೆ. ನಗರದ ವಿಕ್ಟೋರಿಯಾ, ವಾಣಿ ವಿಲಾಸ, ಕೆಸಿ ಜನರಲ್ , ಬೌರಿಂಗ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್, ಐಸಿಯು ಬೆಡ್ ಗಳು ಭರ್ತಿಯಾಗಿದ್ದು, ಮಕ್ಕಳ ಚಿಕಿತ್ಸೆಗಾಗಿ ಪೋಷಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿಯೂ ಮಕ್ಕಳಲ್ಲಿ ನ್ಯೂಮೋನಿಯಾ ಸಮಸ್ಯೆ ಕಾಡುತ್ತಿದ್ದು, ನೆಗಡಿ, ಕೆಮ್ಮು, ಕಫ, ಜ್ವರದ ಜೊತೆ ನ್ಯುಮೋನಿಯಾದಿಂದ ಮಕ್ಕಳು ಬಳಲುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಒಂದರಿಂದ ಎರಡು ವರ್ಷದ ಮಕ್ಕಳು ಇಂತಹ ಸಮಸ್ಯೆಗೆ ಗುರಿಯಾಗುತ್ತಿದ್ದು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸಿದೆ ಎಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ್ ಮಾಹಿತಿ ನೀಡಿದ್ದಾರೆ.
ಕಿಮ್ಸ್ ನಲ್ಲಿ 163 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಒಂದೇ ತಿಂಗಳಲ್ಲಿ 7 ಮಕ್ಕಳು ನ್ಯೂಮೋನಿಯಾಗೆ ಬಲಿಯಾಗಿದ್ದಾರೆ. ಆಸ್ಪತ್ರೆಯಲ್ಲಿ ಮಕ್ಕಳ ವಿಭಾಗದ ಬೆಡ್ ಭರ್ತಿಯಾಗಿದೆ. ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ