ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೂರು ಕೃಷಿ ಕಾಯ್ದೆ ಸಂವಿಧಾನಿಕವಾಗಿ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಮತ್ತೆ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಿದೆ. ದೆಹಲಿಯಲ್ಲಿ ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಭರವಸೆ ನೀಡಿದೆ. ಆದರೆ ಸಂವಿಧಾನಬದ್ಧವಾಗಿ ಸರ್ಕಾರ ಮಸೂದೆ ವಾಪಸ್ ಪಡೆಯಬೇಕು ಎಂದು ರೈತರು ಪ್ರತಿಭಟನೆ ಮೂಲಕ ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರೈತರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಟೋಲ್ ನಾಕಾ ಬಳಿ ರಸ್ತೆ ತಡೆ ನಡೆಸಿದ ರೈತರು ಹಾಗೂ ರೈತ ಮಹಿಳೆಯರು ಬಾರುಕೋಲು ಚಳುವಳಿ ನಡೆಸಿ ರಾಜ್ಯದಲ್ಲಿಯೂ ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದರೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈ ನಿಟ್ಟಿನಲ್ಲಿ ಅಧಿಕೃತ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ರೈತರ ಇನ್ನಿತರ ಬೇಡಿಕೆಗಳನ್ನು ಅಧಿವೇಶನದಲ್ಲಿ ಈಡೇರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹಲವು ರೌತರನ್ನು ಪೊಲೀಸರು ವಶಕ್ಕೆ ಪಡೆದರು.
ಇನ್ನು ರೈತ ಮುಖಂಡ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು-ಮೈಸೂರು, ಮೈಸೂರು ಊಟಿ ಹೆದ್ದಾರಿಯನ್ನು ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸಂಜೆ ನಾಲ್ಕು ಗಂಟೆ ವರೆಗೂ ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ ನಿಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಧಾರವಾಡ ಕಾಲೇಜಿನಲ್ಲಿ ಕೊರೊನಾ ಅಟ್ಟಹಾಸ; ಬೆಂಗಳೂರಿನ ಖಾಸಗಿ ಶಾಲೆಯಲ್ಲಿಯೂ ಹಲವು ಮಕ್ಕಳಿಗೆ ಸೋಂಕು; ಮತ್ತೆ 3ನೇ ಅಲೆಯ ಆತಂಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ