ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ದ್ವಿಸದಸ್ಯ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಜಯಭೇರಿ ಭಾರಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಸ್ಥಾನದಲ್ಲಿ ಮುನ್ನಡೆದಿದ್ದಾರೆ.
ಬಿಜೆಪಿಯ ಮಹಾಂತೇಶ ಕವಟಗಿಮಠ 3ನೇ ಸ್ಥಾನದಲ್ಲಿದ್ದು, ಅಧಿವೇಶನ ನಡೆಯುವ ಸಂದರ್ಭದಲ್ಲೇ ಬಿಜೆಪಿ ಮುಖಭಂಗ ಅನುಭವಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ ನೀಡಬೇಕೆಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬೇಡಿಕೆಯಿಟ್ಟಿದ್ದರು. ಆದರೆ ಮಹಾಂತೇಶ ಕವಟಗಿಮಠ ಅವರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು. ಹಾಗಾಗಿ ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಕಣಕ್ಕಿಳಿದಿದ್ದರು.
ಕಾಂಗ್ರೆಸ್ ಸೋಲಿಸುವುದಕ್ಕಾಗಿಯೇ ಲಖನ್ ಕಣಕ್ಕಿಳಿಸಿದ್ದಾಗಿ ರಮೇಶ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಆದರೆ ಬಿಜೆಪಿಯನ್ನೇ ಅವರು ಸೋಲಿಸುವ ಲಕ್ಷಣ ಕಾಣುತ್ತಿರುವುದು ವಿಪರ್ಯಾಸವಾಗಿದೆ.
ಈ ಚುನಾವಣೆ ಫಲಿತಾಂಶ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಭಾರಿ ಬದಲಾವಣೆಗೆ ಕಾರಣವಾಗುವ ಸಾಧ್ಯತೆ ಇದೆ. ಬಿಜೆಪಿಯ 13 ಶಾಸಕರಿದ್ದರೂ ಪರಿಷತ್ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಾಗದಿದ್ದಲ್ಲಿ ಇದು ಆಡಳಿತ ಪಕ್ಷಕ್ಕೆ ತೀವ್ರ ಆಘಾತವನ್ನುಂಟು ಮಾಡಲಿದೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಭರ್ಜರಿ ಗೆಲುವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ