ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಕಾರ್ಯಕರ್ತರಿಗೆ ಕರೆ ಮಾಡಿ, ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನಗೆ ನೇರವಾಗಿ ಪ್ರಾಣಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ನಮ್ಮ ಪೂರ್ವಜರು ಬ್ರಿಟೀಷರ ಗುಂಡಿಗೆ ಭಯಪಟ್ಟಿಲ್ಲ ಇನ್ನು ಇಂತಹ ಬೆದರಿಕೆಗೆ ಹೆದರುವ ಪ್ರಶ್ನೆ ಇಲ್ಲ. ಬಿಜೆಪಿ ನಾಯಕರ ನಕಲಿ ರಾಷ್ಟ್ರಭಕ್ತಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಸಚಿವ ಈಶ್ವರಪ್ಪ ವಿರುದ್ಧ ಕಿಡಿಕಾರಿರ ಹರಿಪ್ರಸಾದ್, ಸಚಿವ ಈಶ್ವರಪ್ಪ ಗೂಂಡಾಗಳಿಗೆ ಜಗದ್ಗುರು. ದೇಶದ ಅನೈತಿಕ ಚಟುವಟಿಕೆಗಳ ಗುರು. ಪ್ರಚೋದನಕಾರಿ ಕರೆಗಳ ಮೂಲಕ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಿದ್ದಾರೆ. ರಾಷ್ಟ್ರಧ್ವಜ ಇರುವಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದಾರೆ ಅಂದರೆ ಇವರು ರಾಷ್ಟ್ರಧ್ವಜವನ್ನು ಒಪ್ಪುವುದಿಲ್ಲ ಎಂದರ್ಥ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ, ದೇಶದ್ರೋಹ ಕೆಲಸ ಮಾಡಿರುವ ಸಚಿವ ಈಶ್ವರಪ್ಪ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಳಗಾವಿ: ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ