
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.
ಬೆಂಗಳೂರಿನ ವಿನ್ಸೆಂಟ್ ಪಲ್ಲೋಟಿ ಹಾಗೂ ಎಬಿನೈಜರ್ ಎಂಬ ಎರಡು ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆಯೊಡ್ಡಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದು, ಎರಡು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದಿದ್ದಾರೆ.
ಎರಡು ಶಾಲೆಗಳಿಗೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಗಳು ದೌಡಾಯಿಸಿದ್ದು, ಬಾಂಬ್ ಪತ್ತೆಗಾಗಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳನ್ನು ಶಾಲೆಯಿಂದ ಹೊರಕಳುಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.