ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜನರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. “ಸಕಾಲ”ದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಆದ್ದರಿಂದ ಅರ್ಜಿ ವಿಲೇವಾರಿ ತೋರಿಸುವ ಉದ್ದೇಶಕ್ಕೆ ಸಕಾರಣವಿಲ್ಲದೇ ಅರ್ಜಿಗಳನ್ನು ತಿರಸ್ಕರಿಸಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮೇ ೧೧) ನಡೆದ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅತೀ ಹೆಚ್ಚು ಸ್ಥಳೀಯ ಸಂಸ್ಥೆಗಳಿರುವುದು ಬೆಳಗಾವಿ ಜಿಲ್ಲೆಯಲ್ಲಿ ಆದ್ದರಿಂದ ಪ್ರತಿಯೊಂದು ಯೋಜನೆಯ ಅನುಷ್ಠಾನದ ಹೆಚ್ಚಿನ ಹೊಣೆಗಾರಿಕೆ ನಗರ ಸ್ಥಳೀಯ ಸಂಸ್ಥೆಗಳ ಮೇಲಿದೆ.
ಮುಖ್ಯಾಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಪ್ರಸಕ್ತ ವರ್ಷದಲ್ಲಿ ಜಾರಿಗೊಳಿಸಲಾಗುತ್ತಿರುವ ವಸತಿ ಮತ್ತಿತರ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳಿಗೆ ರ‍್ಯಾಂಕಿಂಗ್ ಪದ್ಧತಿ ಅನುಷ್ಠಾನ:
ಜಿಲ್ಲೆಯ ಕಾರ್ಯನಿರ್ವಹಣಾ ವಿಧಾನ ಚುರುಕುಗೊಳಿಸಲು ರ‍್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ನಗರೋತ್ಥಾನ, ಘನತ್ಯಾಜ್ಯ ವಿಲೇವಾರಿ, ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ವೇಗವನ್ನು ಮಾನದಂಡವಾಗಿಟ್ಟುಕೊಂಡು ಪ್ರತಿ ಹದಿನೈದು ದಿನಗಳಿಗೊಮ್ಮೆ ರ‍್ಯಾಂಕಿಂಗ್ ನೀಡಲಾಗುವುದು. ಇದರಿಂದ ಕಾರ್ಯಕ್ಷಮತೆ ಹೆಚ್ಚಿಸಲು ಸಾಧ್ಯವಾಗಲಿದೆ.
ರ‍್ಯಾಂಕ್ ನೀಡುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಮಾನದಂಡ ರೂಪಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.
ವಸತಿ ಯೋಜನೆ-ಫಲಾನುಭವಿಗಳ ಪಟ್ಟಿಗೆ ಅನುಮೋದನೆ ಪಡೆಯಲು ಸೂಚನೆ:
ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಯಾ ಮತಕ್ಷೇತ್ರದ ವ್ಯಾಪ್ತಿಯ ಶಾಸಕರನ್ನು ಸಂಪರ್ಕಿಸಿ ಕೂಡಲೇ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಒಂದು ವೇಳೆ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಅನುಮೋದನೆ ಪಡೆದುಕೊಳ್ಳಬೇಕು. ಒಂದು ವೇಳೆ ವಿನಾಕಾರಣ ವಿಳಂಬ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರತಿದಿನ ನಡೆಯುವ ಜಿಪಿಎಸ್ ಪ್ರಕ್ರಿಯೆ ಮೇಲೆ ನಿಗಾವಹಿಸಲಾಗುವುದು.
ಬ್ಯಾಂಕ್ ಲಿಂಕೇಜ್ ಗೆ ಸಂಬಂಧಿಸಿದಂತೆ ಮುಂದಿನ ವಾರ ಬ್ಯಾಂಕರುಗಳ ಜತೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಈಶ್ವರ ಉಳ್ಳಾಗಡ್ಡಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನರೇಗಾ ಯೋಜನೆಯಡಿ 84 ಕೆರೆಗಳ ಅಭಿವೃದ್ಧಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ