ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷಿತತೆ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಇಂದು ಒಂದು ದಿನ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಈ ನಡುವೆ ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿಯೂ ಮಳೆ ಅವಾಂತರದಿಂದಾಗಿ ಮಕ್ಕಳು ಶಾಲೆಗೆ ಹೋಗಲು ಪರದಾಡುವಂತಾಗಿದೆ. ಚಿತ್ರದುರ್ಗದ ಪಿಳ್ಳೆಕೇರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣ ಜಲಾವೃತಗೊಂಡಿದ್ದು, ಬಿರುಗಾಳಿ ಮಳೆಗೆ ಮರಗಳು ಧರಾಶಾಹಿಯಾಗಿವೆ. ಹಾಸನದ ಸಕಲೇಶಪುರದ ಕಲ್ಲಾರೆಹಳ್ಳಿಯಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ವರಣನ ಆರ್ಭಟಕ್ಕೆ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪತ್ನಿಗೆ ಕಿರುಕುಳ; ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಸಹೋದರನ ವಿರುದ್ಧ ಎಫ್ ಐ ಆರ್ ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ